ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳು ಸೇರಿದಂತೆ ಖಾಸಗಿ ಆಸ್ಪತ್ರೆ ಮತ್ತು ನಸಿರ್ಂಗ್ ಹೋಂಗಳಲ್ಲಿ ತೀವ್ರ ಉಸಿರಾಟದ ಸಮಸ್ಯೆ, ಜ್ವರ, ಇನ್‍ಫ್ಲೂಯೆನ್ಜಾ ಲೈಕ್ ಇಲ್ನೆಸ್(ಐ.ಇಲ್.ಐ) ತೊಂದರೆಯಿಂದ ದಾಖಲಾಗುವ ವ್ಯಕ್ತಿಗಳನ್ನು ಕಡ್ಡಾಯವಾಗಿ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.
ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ, ಜಿಲ್ಲಾ ಮಟ್ಟದ ಕರ್ನಾಟಕ ಪ್ರೈವೇಟ್ ಮೆಡಿಕಲ್ ಎಸ್ಟಾಬ್ಲಿಷ್‍ಮೆಂಟ್ (ಕೆ.ಪಿ.ಎಂ.ಇ.) ಕಾಯ್ದೆ ಪರಿಶೀಲನಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿನ ಕೈಗಾರಿಕೆ, ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಪೂರ್ವಸಿದ್ಧತೆಯೊಂದಿಗೆ ಸಂಚಾರಿ ವಾಹನದ ಮೂಲಕ ತಾಲ್ಲೂಕುವಾರು ಪ್ರತಿ ದಿನ ಕನಿಷ್ಠ 400 ವ್ಯಕ್ತಿಗಳ ಗಂಟಲು ದ್ರವ ಪರೀಕ್ಷೆಯನ್ನ ಕಡ್ಡಾಯವಾಗಿ ನಡೆಸಬೇಕೆಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರಲ್ಲದೆ ಗಂಟಲು ದ್ರವ ಪರೀಕ್ಷೆಗಾಗಿ ಪ್ರತಿ ತಾಲ್ಲೂಕಿಗೊಂದರಂತೆ ಆಂಬುಲೆನ್ಸ್ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಸುರಕ್ಷತಾ ಪರಿಕರಗಳನ್ನು ಜಿಲ್ಲಾಡಳಿತದಿಂದ ಒದಗಿಸಲಾಗುವುದು ಎಂದು ತಿಳಿಸಿದರು.
ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದೆ ಜನರು ಸಾರ್ವಜನಿಕ ಸ್ಥಳಗಳಲ್ಲಿ ಸಂಚರಿಸುವುದು ಕಂಡುಬಂದಲ್ಲಿ ದಂಡ ವಿಧಿಸಲಾಗುವುದು. ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿಯಾಗಿದ್ದು ಅಧಿಕಾರಿಗಳು ಈ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಧರ್ಮೇಂದ್ರ, ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಖಾಸಗಿ ಆಸ್ಪತ್ರೆಯ ವೈದ್ಯರುಗಳು, ಪ್ರತಿನಿಧಿಗಳು ಉಪಸ್ಥಿತರಿದ್ದರು.