ದೊಡ್ಡಬಳ್ಳಾಪುರ: ಮತದಾರರ ಸಂಖ್ಯೆ ಹಾಗೂ ಮತಗಟ್ಟೆ ಸಂಖ್ಯೆ ಕಡಿಮೆಯಿದ್ದರೂ, ಮತದಾನ ಪ್ರಕ್ರಿಯೆ ಕಾರ್ಯ ಪ್ರಮುಖವಾಗಿರುವ ಹಿನ್ನೆಲೆ ಮತಗಟ್ಟೆ ಅಧಿಕಾರಿಗಳು ಅತ್ಯಂತ ಎಚ್ಚರಿಕೆಯಿಂದ ಹಾಗೂ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾ ಸಂಬಂಧ ಮತಗಟ್ಟೆ ಅಧಿಕಾರಿಗಳ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಕ್ಟೋಬರ್ 28 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ರವರೆಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಮತಗಟ್ಟೆಗೆ ನಿಯೋಜನೆಯಾಗುವ ಅಧಿಕಾರಿಗಳು ಚುನಾವಣಾ ಆಯೋಗದಿಂದ ಅಧಿಕೃತವಾಗಿ ಸೂಚಿಸಿರುವ ಗುರುತಿನ ಚೀಟಿಗಳ ಬಗ್ಗೆ ಎಚ್ಚರವಹಿಸಬೇಕು ಎಂದರಲ್ಲದೆ, ಮತದಾನದ ಗೌಪ್ಯತೆ ಕಾಪಾಡುವುದು ಪ್ರತಿಯೊಬ್ಬರ ಮಹತ್ತರವಾದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ 3, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 5, ಹೊಸಕೋಟೆ ತಾಲ್ಲೂಕಿನಲ್ಲಿ 5 ಹಾಗೂ ದೇವನಹಳ್ಳಿ ತಾಲ್ಲೂಕಿನಲ್ಲಿ 4 ಮತಗಟ್ಟೆ ಸ್ಥಾಪಿಸಲಾಗಿದೆ. ಎಲ್ಲಾ ಮತದಾನ ಕೇಂದ್ರಗಳಲ್ಲಿ ಅವಶ್ಯ ಮೂಲಭೂತ ಸೌಲಭ್ಯಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಕಾರ್ಯ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದ್ದು, ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಮತದಾನ ಕೇಂದ್ರಗಳಿಗೆ ಕಳುಹಿಸಲು ಹಾಗೂ ಡಿ-ಮಸ್ಟರಿಂಗ್ ಕೇಂದ್ರಕ್ಕೆ ಕರೆತರಲು ವಾಹನಗಳ ಅವಶ್ಯವಿರುವ ಹಿನ್ನೆಲೆ ವಾಹನಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.
ಮತಗಟ್ಟೆ ಕಾರ್ಯಕ್ಕೆ ನಿಯೋಜಿಸಬೇಕಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಇಂದು ಮೊದಲ ಹಂತದ ತರಬೇತಿ ನೀಡಲಾಗಿದ್ದು, ಅಕ್ಟೋಬರ್ 20 ಹಾಗೂ 27ರಂದು ಎರಡು ಹಾಗೂ ಮೂರನೇ ಹಂತದ ತರಬೇತಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಮಾಹಿತಿ ನೀಡಿದರು.
ಕರೊನಾ ವೈರಾಣು ಸೋಂಕು ಭೀತಿ ಹಿನ್ನಲೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಮತಗಟ್ಟೆ ಅಧಿಕಾರಿಗಳು ಪಿಪಿಇ ಕಿಟ್ ಧರಿಸಿ ಕಾರ್ಯ ನಿರ್ವಹಿಸಬೇಕು ಎಂದರಲ್ಲದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳವುದರೊಂದಿಗೆ ಸ್ಯಾನಿಟೈಸರ್ ಬಳಕೆ ಕಡ್ಡಾಯವೆಂದು ತಿಳಿಸಿದರು.
ಪ್ರತಿಯೊಂದು ಮತಗಟ್ಟೆಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿ, ಮತಗಟ್ಟೆಗೆ ಬರುವ ಮತದಾರರ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಮತದಾನ ಪ್ರಕ್ರಿಯೆಗೆ ಅವಕಾಶ ಮಾಡಿ ಕೊಡಲಾಗುವುದು ಎಂದರು ಹೇಳಿದರು.
ತರಬೇತಿ ಕಾರ್ಯಕ್ರಮದಲ್ಲಿ ಮಾಸ್ಟರ್ ಟ್ರೈನರ್‍ಗಳಾದ ಡಿ.ಎನ್.ಬಾಬು ಹಾಗೂ ಕೆಂಪೇಗೌಡ, ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.