ಬೆಂಗಳೂರು: ಗ್ರಾಮಾಂತರ ಜಲ್ಲೆಯ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ವತಿಯಿಂದ ಏರ್ಪಡಿಸಲಾದ “65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ” ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಧ್ವಜಾರೋಹಣ ನೆರವೇರಿಸಿ, “ರಾಷ್ಟ್ರಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ಈ ವೇಳೆ ಪೊಲೀಸ್ ಇಲಾಖೆಯ ವಿವಿಧ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಚಿವ ಆರ್.ಅಶೋಕ್ ಪರೇಡ್ ವೀಕ್ಷಿಸಿ ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಏಕೀಕರಣಗೊಂಡು 64 ವರ್ಷ ಪೂರ್ಣಗೊಂಡು, 65ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಈ ಶುಭ ಘಳಿಗೆಯಲ್ಲಿ ಕರ್ನಾಟಕ ರಾಜ್ಯ ಮತ್ತು ಜಿಲ್ಲೆಯಾದ್ಯಂತ ಸುಖ, ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಸಲಿ ಹಾಗೂ ಸಮಸ್ತ ನಾಗರಿಕರು ಸೌಹಾರ್ದಯುತ ಮತ್ತು ಸಹಬಾಳ್ವೆ ನಡೆಸುವಂತಾಗಲಿ ಎಂದು ಹಾರೈಸುತ್ತೇನೆ ಎಂದರು.
ಕಾರ್ಯಕ್ರಮದ ಅಂಗವಾಗಿ 2020ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಾಂಗ ಮಾಡಿ ಜಿಲ್ಲಾ ಮಟ್ಟದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಸನ್ಮಾನಿಸಿದರು. ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 5 ಮಂದಿ ಸಾಧಕರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಪ್ರಭಾರ ಅಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ವೈ.ಎನ್.ಶಶಿಕಲಾ, ಉಪಾಧ್ಯಕ್ಷೆ ಲಲಿತಮ್ಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್ ಮತ್ತಿತರಿದ್ದರು.