ಬೆಂ.ಗ್ರಾ.ಜಿಲ್ಲೆ: ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳು ಉದಾಸೀನ ತೋರದೆ ಕೂಡಲೇ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಾದ, ನಂತರ ವೈದ್ಯರ ಶಿಫಾರಸ್ಸಿನ ಮೇರೆಗೆ ಆಸ್ಪತ್ರೆಗೆ ದಾಖಲಾಗಬೇಕು ಎಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು.
ನೆಲಮಂಗಲ ತಾಲ್ಲೂಕು ಕೋವಿಡ್ ಕೇರ್ ಸೆಂಟರ್, ಸಾರ್ವಜನಿಕ ಆಸ್ಪತ್ರೆ ಹಾಗೂ ಟಿಬೆಟಿಯನ್ ಹಾಸ್ಟೆಲ್‌ಗೆ ಇಂದು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಮಾತನಾಡಿದರು.
ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಅಮೇರಿಕಾದಿಂದ 40 ಆಕ್ಸಿಜನ್ ಕಾನ್ಸೆನ್ಟ್ರೇಟರ್ ಆಮದು ಮಾಡಿಕೊಳ್ಳಲಾಗುತ್ತಿದ್ದು, ಅವುಗಳು ಈಗಾಗಲೇ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿದೆ ಎಂದು ತಿಳಿಸಿದ ಅವರು ಶೀಘ್ರವೇ ಜಿಲ್ಲೆಗೆ ಅವುಗಳು ತಲುಪಲಿದ್ದು, ಇದರ ಮೇಲುಸ್ತುವಾರಿಯನ್ನು ಜಿಲ್ಲಾಧಿಕಾರಿ ಅವರು ವಹಿಸಿದ್ದಾರೆ ಎಂದರು.
ಕೋವಿಡ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದ್ದು, ನಾಲ್ಕು ತಾಲ್ಲೂಕುಗಳ ಶಾಸಕರ ಸಹಕಾರದೊಂದಿಗೆ ಕೋವಿಡ್ ನಿಯಂತ್ರಣ ಹಾಗೂ ನಿರ್ಮೂಲನೆ ಮಾಡಲು ಶ್ರಮಿಸಲಾಗುತ್ತಿದೆ. ನೆಲಮಂಗಲ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಟಿಬೆಟಿಯನ್ ಸೆಂಟರ್ ಅನ್ನು ಮತ್ತಷ್ಟು ಮೇಲ್ದರ್ಜೆಗೆ ಏರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಕೋವಿಡ್ ಸೋಂಕು ಈಗಾಗಲೇ ಎಲ್ಲೆಡೆ ವ್ಯಾಪಕವಾಗಿ ವ್ಯಾಪಿಸಿರುವ ಹಿನ್ನೆಲೆಯಲ್ಲಿ, ಕೋವಿಡ್ ಸೋಂಕು ದೃಢಪಟ್ಟ ವ್ಯಕ್ತಿಗಳು ಭಯಭೀತರಾಗದೆ ಮೊಬೈಲ್ ಸ್ವಿಚ್ ಆಫ್ ಮಾಡದೆ, ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವುದರಿಂದ ರೋಗ ಅತಿರೇಕಕ್ಕೆ ಹೋಗದಂತೆ ಹಾಗೂ ಪ್ರಾಣಾಪಾಯವನ್ನು ತಡೆಯಬಹುದು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ಜನರು ಕೋವಿಡ್ ಸೋಂಕು ದೃಢಪಟ್ಟ ಕೂಡಲೇ ಭಯಪಡದೇ, ಕೋವಿಡ್ ಕೇರ್ ಸೆಂಟರ್ ಗೆ ದಾಖಲಾಗಬೇಕು. ಇದರಿಂದ, ಮನೆಯ ಸದಸ್ಯರಿಗೆ ಸೋಂಕು ಹರಡುವುದನ್ನು ತಡೆಗಟ್ಟುವ ಸಾಧ್ಯತೆ ಇದೆ ಎಂದರು.
ಕೋವಿಡ್ ಸೆಂಟರ್ ಗೆ ದಾಖಲಾಗುವ ಸೋಂಕಿತರಿಗೆ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ, ಔಷಧವನ್ನು ಸಮಯಕ್ಕೆ ಸರಿಯಾಗಿ ನೀಡಲಾಗುವುದರಿಂದ ಸೋಂಕಿತರು ಬಹುಬೇಗ ಗುಣಮುಖರಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದರು.ಶೀಘ್ರವೇ ಆಯುರ್ವೇದ ಹಾಗೂ ಆಯುಷ್ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಲಾಗಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ ಪ್ರತಿ ದಿನ 15-20 ಮಂದಿಗೆ ಆಕ್ಸಿಜನ್ ಅವಶ್ಯಕತೆ ಇರುವುದರಿಂದ ಮುಂದಿನ ದಿನಗಳಲ್ಲಿ ತಾಲ್ಲೂಕಿಗೆ ನೂರು ಆಕ್ಸಿಜನ್ ಕಾನ್ಸೆನ್ಟ್ರೇಟರ್ ಗಳನ್ನು ಪೂರೈಸಲಾಗುವುದು ಎಂದು ತಿಳಿಸಿದರು.
ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ದೂರು ಕೇಳಿ ಬಂದಿದ್ದು, ಅಲ್ಲಿನ ವೈದ್ಯರು ಗೈರಾಗುತ್ತಿರುವುದರ ಬಗ್ಗೆ ಮ್ಯಾನೇಜ್‌ಮೆಂಟ್ ತಿಳಿಸಿದ್ದು, 24 ಗಂಟೆಗಳಲ್ಲಿ ಅಂತಹ ವೈದ್ಯರ ಮಾಹಿತಿ ಪಡೆದು, ನೋಟಿಸ್ ಜಾರಿ ಮಾಡುವಂತೆ ತಿಳಿಸಲಾಗಿದ್ದು, ತಪ್ಪು ಸಾಭೀತಾದಲ್ಲಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿದಾಗ ಫಲಿತಾಂಶ ಬರುವುದು ವಿಳಂಬವಾಗುತ್ತಿದ್ದು, ಜ್ವರ ನೆಗಡಿಯಂತ ಲಕ್ಷಣ ಕಂಡುಬಂದಲ್ಲಿ ರ್ಯಾಟ್ ಟೆಸ್ಟ್ ಮಾಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ತಂಡಗಳನ್ನು ರಚಿಸಲಾಗಿದ್ದು, ನಗರ ಪ್ರದೇಶಗಳಿಂದ ವಲಸೆ ಬಂದವರಿಗೆ ಕೋವಿಡ್ ಪರೀಕ್ಷೆ ಮಾಡಿಸಬೇಕೇ ಅಥವಾ ಬೇಡವೇ ಎಂಬುದನ್ನು ಅವರೇ ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದರು.
ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಶ್ರೀನಿವಾಸಮೂರ್ತಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಉಪ ಪೋಲಿಸ್ ವರಿಷ್ಠಾಧಿಕಾರಿ ಲಕ್ಷೀ ಗಣೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…