ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸಂದರ್ಭದಲ್ಲಿ ಯೋಗ ಮತ್ತು ಪ್ರಾಣಾಯಾಮ ಮಾಡುವುದರಿಂದ ಶ್ವಾಸಕೋಶ ಹಾಗೂ ಉಸಿರಾಟದ ಸಮಸ್ಯೆ ನಿವಾರಣೆಯಾಗುತ್ತದೆ ಹಾಗೂ ಯೋಗವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋದರೆ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
“ಸ್ವಾತಂತ್ರ್ಯದ 75ನೇ ವರ್ಷ, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ ಹಾಗೂ ಸುರಪನೇನಿ ವಿದ್ಯಾಸಾಗರ್ ಫೌಂಡೇಶನ್ ವತಿಯಿಂದ ದೇವನಹಳ್ಳಿ ಪುರಸಭಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಯೋಗ ಹಾಗೂ ಪ್ರಾಣಾಯಾಮ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆರೋಗ್ಯ ವೃದ್ಧಿ ಯೋಗ ಹಾಗೂ ಪ್ರಾಣಾಯಾಮ ಏರ್ಪಡಿಸಲಾಗಿದೆ. ಯೋಗ ಮಾಡುವುದರಿಂದ ಹಲವು ಉಪಯೋಗಗಳಿದ್ದು, ಯೋಗದಿಂದ ಅಧಿಕಾರಿಗಳು ಕ್ರೀಯಾಶೀಲವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಹಾಗೂ ಕೋವಿಡ್ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಜನರಿಗೆ ಆರೋಗ್ಯ ಮುಖ್ಯವಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಕರೋನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ಉತ್ಸಾಹ ತುಂಬಲು ಯೋಗ ಹಾಗೂ ಪ್ರಾಣಾಯಾಮ ಶಿಬಿರ ಏರ್ಪಡಿಸಿರುವುದು ಶ್ಲಾಘನೀಯ ಎಂದರಲ್ಲದೆ, ಮುಂದಿನ ದಿನಗಳಲ್ಲಿ ಆಸ್ಪತ್ರೆಗಳು ಹಾಗೂ ಶಾಲಾ ಕಾಲೇಜುಗಳಲ್ಲಿಯೂ ಯೋಗ ಹಾಗೂ ಪ್ರಾಣಾಯಾಮ ಮಾಡಿಸುವಂತೆ ತಿಳಿಸಲಾಗುವುದು ಎಂದು ಹೇಳಿದರು.
ಸೂರಪನೇನಿ ವಿದ್ಯಾ ಸಾಗರ್ ಫೌಂಡೇಶನ್‌ನ ಅಧ್ಯಕ್ಷ ವಿದ್ಯಾಸಾಗರ್ ಅವರು ಮಾತನಾಡಿ, ಪ್ರಾಣಾಯಾಮ ಎಂದರೆ ಉಸಿರಾಟದ ಪ್ರಯಾಣ ಎಂದರ್ಥ, ಪ್ರಾಣಾಯಾಮ ಮಾಡುವುದರಿಂದ ಶ್ವಾಸಕೋಶ ಹಾಗೂ ಕಂಠದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ, ಕೋವಿಡ್ ಎರಡನೇ ಅಲೆಯನ್ನು ತಡೆಯಲು ಅನುಕೂಲವಾಗುತ್ತದೆ. ದೀರ್ಘವಾಗಿ ಉಸಿರಾಡುವುದರಿಂದ ಶ್ವಾಸಕೋಶಕ್ಕೆ ಆಮ್ಲಜನಕ ಸರಬರಾಜಾಗುತ್ತದೆ ಹಾಗೂ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಲಿದೆ ಎಂದರಲ್ಲದೆ, ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ವೃದ್ಧಿಸುತ್ತದೆ ಎಂದು ಯೋಗ ಹಾಗೂ ಪ್ರಾಣಾಯಾಮದ ಮಹತ್ವ ತಿಳಿಸಿದರು.
ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ರೇಖಾ ವೇಣುಗೋಪಾಲ್, ಸದಸ್ಯರಾದ ರವೀಂದ್ರ, ಸುರೇಶ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಆಯುಷ್ ಇಲಾಖೆ ವೈದ್ಯಾಧಿಕಾರಿ ಡಾ.ಅಕ್ಕಿಮ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ತಹಶೀಲ್ದಾರ್ ಅನಿಲ್‌ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….