ಬೆಂ.ಗ್ರಾ.ಜಿಲ್ಲೆ: ರಾಜ್ಯ ಸರ್ಕಾರವು ಶೀಘ್ರದಲ್ಲಿ ಸ್ನಾತಕೋತ್ತರ ಹಾಗೂ ಪದವಿ ಕಾಲೇಜುಗಳನ್ನು ತೆರೆಯಲು ಆದೇಶಿಸುವ ಸಾಧ್ಯತೆಯಿರುವುದರಿಂದ, ಹದಿನೆಂಟು ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಶೇ.100 ರಷ್ಟು ಲಸಿಕೆ ಹಾಕಿಸುವ ಗುರಿ ಹೊಂದಲಾಗಿದ್ದು, ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕಾಕರಣ ನಡೆಸುವ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ತರಗತಿಗಳು, ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಕಾಲೇಜು ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಹಾಕಿಸುವಂತೆ ಸೂಚನೆ ನೀಡಿದರು.ಸರ್ಕಾರದ ಮಾರ್ಗಸೂಚಿಯಂತೆ ಆದ್ಯತೆ ಮೇರೆಗೆ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯ ಯಾವುದೇ ಪ್ರಾಥಮಿಕ, ಸಮುದಾಯ ಅಥವಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಲೇಜಿನ ಗುರುತಿನ ಚೀಟಿಯನ್ನು ತೋರಿಸಿ ಲಸಿಕೆ ಪಡೆಯಬಹುದು ಎಂದರಲ್ಲದೆ, ಈಗಾಗಲೇ ಲಸಿಕೆ ಪಡೆದಿರುವ, ಪಡೆಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಪಟ್ಟಿ ತಯಾರಿಸಿ, ಲಸಿಕೆ ಪಡೆಯದವರಿಗೆ ಲಸಿಕೆ ಪಡೆಯುವಂತೆ ಮನವೊಲಿಸಿ, ಶೇ.100 ರಷ್ಟು ಗುರಿ ಸಾಧಿಸುವಂತೆ ತಿಳಿಸಿದರು.
ಆರೋಗ್ಯ ಇಲಾಖೆ ವತಿಯಿಂದ ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳಿಗಾಗಿಯೇ ವಾರಾಂತ್ಯದಲ್ಲಿ ವಿಶೇಷ ಲಸಿಕಾ ಅಭಿಯಾನವನ್ನು ಹಂತ-ಹಂತವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಕಾಲೇಜು ವತಿಯಿಂದ ಲಸಿಕೆ ಪಡೆಯದ ವಿದ್ಯಾರ್ಥಿಗಳ ಮಾಹಿತಿ ನೀಡಿದರೆ, ಜಿಲ್ಲಾಡಳಿತದ ವತಿಯಿಂದ ಲಸಿಕೆ ಪಡೆಯುವಂತೆ ಸಂದೇಶ ಕಳುಹಿಸಿ ಉತ್ತೇಜಿಸಲಾಗುವುದು ಎಂದರು.
ಈ ಸಭೆಗೂ ಮುನ್ನ ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆಯಲು ಗರ್ಭಿಣಿಯರ ನೋಂದಣಿಯಾಗುತ್ತಿದೆ ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ನೋಂದಣಿಯಾಗದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ಹೊಸ ತಂತ್ರಜ್ಞಾನ ಅಭಿವೃದ್ಧಿಪಡಿಸಿ ನೋಂದಣಿ ಮಾಡಲು ಆಸ್ಪತ್ರೆಯವರಿಗೆ ತರಬೇತಿ ನೀಡಬೇಕು ಎಂದರಲ್ಲದೆ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಲಸಿಕೆಯನ್ನು ಮಹಿಳೆಯರಿಗೆ ಹಾಗೂ ಮಕ್ಕಳಿಗೆ ನೀಡುವಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ದೇವನಹಳ್ಳಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಸಂಜಯ್, ದೊಡ್ಡಬಳ್ಳಾಪುರ ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ, ಗೀತಂ ವಿಶ್ವವಿದ್ಯಾಲಯ, ರೈ ವಿಶ್ವವಿದ್ಯಾಲಯ, ದೇವರಾಜ ಅರಸು ತಾಂತ್ರಿಕ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..