ದೊಡ್ಡಬಳ್ಳಾಪುರ: ಆಗಸ್ಟ್ 14 ರಂದು ರಾಜ್ಯವ್ಯಾಪಿ ನಡೆಯಲಿರುವ ಬೃಹತ್ ಲೋಕ್ ಅದಾಲತ್ ಹಿನ್ನಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನ್ಯಾಯಾಲಯದ ಸಭಾಂಗಣದಲ್ಲಿ ರಾಜೀಯಾಗುವ ಪ್ರಕರಣಗಳನ್ನು ವಿಲೇವಾರಿಗೊಳಿಸಲು ಪೂರ್ವಭಾವಿ ಸಭೆ ನಡೆಯಿತು.
ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಆರ್.ದೀಪ, ಈ ಕುರಿತು ಮಾಹಿತಿ ನೀಡಿ, ನ್ಯಾಯಾಲಯಗಳಲ್ಲಿನ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವುದರ ಜೊತೆಗೆ ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನ್ಯಾಯಾಲಯಗಳ ಆವರಣದಲ್ಲಿ ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿವಿಧ ಸಿವಿಲ್ ಪ್ರಕರಣಗಳು, ಚೆಕ್ಕುಗಳ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕಾರ್ಮಿಕರ ವಿವಾದಗಳು, ಹಾಗೂ ಕೈಗಾರಿಕಾ ಕಾರ್ಮಿಕರು ವೇತನಕ್ಕೆ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಧ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಈಗಾಗಲೇ ಸಂಬಂಧಪಟ್ಟವರಿಗೆ ನೋಟಿಸ್ ನೀಡಲಾಗುತ್ತಿದ್ದು, ಬ್ಯಾಂಕ್‍ಗಳಿಗೆ ಮಾಹಿತಿ ತಿಳಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಅದಾಲತ್ ಮೂಲಕ ಇತ್ಯರ್ಥ ಪಡಿಸಲು ವಕೀಲರ ಸಹಕಾರ ಅಗತ್ಯವಾಗಿದೆ ಎಂದರು.
ತಾಲೂಕಿನಲ್ಲಿ 6224 ಪ್ರಕರಣಗಳಿದ್ದು, ಇದರಲ್ಲಿ ಚೆಕ್ ಬೌನ್ಸ್, ಅಪಘಾತ, ಆಸ್ತಿ ವಿಭಾಗ ಪ್ರಕರಣಗಳು ಹೆಚ್ಚಾಗಿವೆ. ಅದಾಲತ್‍ನಲ್ಲಿ ಪ್ರಕರಣಗಳು ಶೀಘ್ರ ಇತ್ಯರ್ಥವಾಗಲಿವೆ. ಎರಡೂ ಕಡೆಯ ಕಕ್ಷೀದಾರರು ಅದಾಲತ್‍ನಲ್ಲಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ನ್ಯಾಯಾಲಯಕ್ಕೆ ಅಲೆದಾಡುವುದು ತಪ್ಪಲಿದ್ದು, ಆರ್ಥಿಕವಾಗಿಯೂ ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಭೆಯಲ್ಲಿ 4 ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ.ಚಂದ್ರ ಶೇಖರ್,ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಸಾಯಿಬಣ್ಣ, ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜ್ಯೋತಿ.ಎಸ್. ಕಾಳೆ, ಅಪರ ಸಿವಿಲ್ ನ್ಯಾಯಾಧೀಶರಾದ ಮಮತಾ ಶಿವಪೂಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಕೀಲರ ಸಂಘದ ಪದಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..