ಬೆಂ.ಗ್ರಾ.ಜಿಲ್ಲೆ: ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸರ್ಕಾರದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಪಿ.ಹೇಮಲತ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ 2021-22ನೇ ಸಾಲಿನ ಆಗಸ್ಟ್-2021ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆಡಿಪಿ) ಪ್ರಗತಿ ಪರಿಶೀಲನೆ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ ಅವರು ಕಾಮಗಾರಿಗಳು ವಿಳಂಬವಾಗದಂತೆ ಶೀಘ್ರವಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಅಂದಾಜು ವೆಚ್ಚದ ಅನುಮೋದನೆ ಪಡೆದು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ಹಲವಾರು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಪ್ರಸಕ್ತ ಹಣಕಾಸು ವರ್ಷದ ಪೂರ್ಣ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರಲ್ಲದೆ, ವಯಸ್ಕರ ಶಿಕ್ಷಣ ಕಾರ್ಯಕ್ರಮದ ಮೂಲಕ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ, ಅಕ್ಷರಸ್ಥರನ್ನಾಗಿಸುವ ಮೂಲಕ ಜಿಲ್ಲೆಯಲ್ಲಿರುವ ಅನಕ್ಷರಸ್ಥರ ಸಂಖ್ಯೆ ಕಡಿಮೆಗೊಳಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ದರದ ಪ್ರಮಾಣ ಶೇ. 0.59 ರಷ್ಟು ದಾಖಲಾಗಿದ್ದು, ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದಾಗ್ಯೂ ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ನೀಡುವುದನ್ನು ಹೆಚ್ಚಿಸಬೇಕು ಎಂದರು.
ಜಿಲ್ಲಾಡಳಿತದಿಂದ ಈಗಾಗಲೇ ಹಲವು ಬಾರಿ ವಿಶೇಷ ಲಸಿಕಾ ಮೇಳವನ್ನು ಆಯೋಜಿಸುವ ಮೂಲಕ ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಲಸಿಕೆಯನ್ನು ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಶೇ. 73 ರಷ್ಟು ಮೊದಲ ಡೋಸ್, ಶೇ. 31 ರಷ್ಟು ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆದಿದ್ದು, ಲಸಿಕೆ ಪಡೆಯುವವರ ಪ್ರಮಾಣ ಹೆಚ್ಚಾಗಬೇಕು ಹಾಗೂ ಶಾಲೆಗಳು ಆರಂಭವಾಗಿರುವುದರಿಂದ ಮಕ್ಕಳಿಗೆ ನೀಡಲಾಗುತ್ತಿರುವ ರೋಗ ನಿರೋಧಕ ಚುಚ್ಚುಮದ್ದುಗಳನ್ನು ನೀಡುವ ಗುರಿಯನ್ನು ಶೇ.100% ರಷ್ಟು ಸಾಧಿಸಬೇಕು ಎಂದು ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಸಣ್ಣ ಉದ್ಯಮ ಹಾಗೂ ಕೈ-ಮಗ್ಗಗಳನ್ನು ಸ್ಥಾಪನೆ ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ ಅವರು, ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಬೇಕು ಹಾಗೂ ಎನ್‌ಆರ್‌ಎಲ್‌ಎಂ ಯೋಜನೆಯಡಿ ಸ್ತ್ರೀ-ಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ತರಬೇತಿಗಳನ್ನು ನೀಡುವ ಮೂಲಕ ಸ್ವ-ಉದ್ಯೋಗಿಗಳನ್ನಾಗಿ ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ಬಿ.ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಡಾ.ಬಿ.ರಮೇಶ್ ರೆಡ್ಡಿ, ಯೋಜನಾ ನಿರ್ದೇಶಕ ಡಾ.ನಾಗರಾಜ್, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..