ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ, ಕೋವಿಡ್ ಜೈವಿಕ ತ್ಯಾಜ್ಯ ವಿಲೇವಾರಿ, ಕಸದ ಸಮಸ್ಯೆ, ಕಟ್ಟಡ ಶಿಥಿಲೀಕರಣ ಸೇರಿದಂತೆ ವೈದ್ಯರ ಕೊರತೆ ಕುರಿತು ಪರಿಶೀಲನೆ ನಡೆಸಿ, ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ತಾಲ್ಲೂಕು ಆಸ್ಪತ್ರೆಗಳ ಬಳಿ ಕೋವಿಡ್ ತ್ಯಾಜ್ಯ ಸಮಸ್ಯೆಯು ಹೆಚ್ಚಾಗಿದ್ದು, ಆಯಾ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಈ ಕುರಿತು ಯಾವುದೇ ರೀತಿಯ ಕ್ರಮ ಕೈಗೊಂಡಿರುವುದಿಲ್ಲ. ಈ ಕುರಿತು ಕೂಡಲೇ ಅಧಿಕಾರಿಗಳು ಗಮನ ಹರಿಸಬೇಕು ಎಂದರಲ್ಲದೆ, ಇದುವರೆಗೂ ಮುನ್ಸಿಪಾಲಿಟಿಯವರೇ ಎಲ್ಲಾ ರೀತಿಯ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳು ಆಸ್ಪತ್ರೆಗಳಿಗೆ ಹೋಗಿ ಅಲ್ಲಿನ ಸ್ಥಿತಿ-ಗತಿಗಳನ್ನು ನೋಡಬೇಕು. ಗರ್ಭಿಣಿಯರು ಮತ್ತು ಮಕ್ಕಳಿಗೆ ಅನುಕೂಲವಾಗಲು ಸಖಿ ಕಟ್ಟಡದಲ್ಲಿಯೇ ಎರಡು ಪ್ರತ್ಯೇಕ ಕೊಠಡಿಯನ್ನು ಮೀಸಲಿಡಬೇಕು ಹಾಗೂ ಹೆರಿಗೆಗೆಂದು ಮಧ್ಯರಾತ್ರಿ ಬರುವ ಗರ್ಭಿಣಿಯರಿಗೆ ಚಿಕಿತ್ಸೆ ನೀಡಲು ವೈದ್ಯರು ಉಪಸ್ಥಿರಿರಬೇಕು ಎಂದರಲ್ಲದೆ, ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕೆ ವಿತರಣೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಆಸ್ಪತ್ರೆಗಳಲ್ಲಿ ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಸಿಬ್ಬಂದಿಗಳ ಮೇಲೆ ಮದ್ಯ ಸೇವಿಸಿರುವ ಕೆಲವು ಕಿಡಿಗೇಡಿಗಳು ಬಂದು, ಜಗಳ ಮಾಡಿರುವ ಪ್ರಕರಣಗಳು ವರಿದಿಯಾಗಿದ್ದು, ಈ ಕುರಿತು ಹೆಚ್ಚಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಟೆಂಡರ್ ಕರೆದು, ಹೆಚ್ಚುವರಿ ಭದ್ರತಾ ಸಿಬ್ಬಂದಿಗಳ ವ್ಯವಸ್ಥೆ ಮಾಡಿಸಲು ಹೇಳಿದರು.
ಇದುವರೆಗೂ ಜಿಲ್ಲೆಯಲ್ಲಿ 4 ಶಿಶು ಮರಣಗಳು ಸಂಭವಿಸಿದ್ದು, ಇದಕ್ಕೆ ಸೂಕ್ತ ಕಾರಣ ಏನೆಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಉಪ ವಿಭಾಗಧಿಕಾರಿ ಅರುಳ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಹಿರಿಯ ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಭವ್ಯ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…