ನವದೆಹಲಿ: ಕಿತ್ತಳೆ ಹಣ್ಣು ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಹಾಜಬ್ಬ ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ.
ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಹಣ್ಣು ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……