ದೊಡ್ಡಬಳ್ಳಾಪುರ: ಎಲ್ಲಾ 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡಲ್ಲಿ ಮಾತ್ರ ಕರೊನಾ ಹಾಗೂ ಅದರ ರೂಪಾಂತರಿ ತಳಿ ತಡೆಗಟ್ಟಲು ಸಾಧ್ಯ ಎಂದು ಜಿ.ಹೊಸಹಳ್ಳಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶ್ವೇತ ನಾಯ್ಕ್ ಹೇಳಿದರು.
ಸೋಮವಾರ ತಾಲೂಕಿನ ಜಿ.ಹೊಸಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ 15 ರಿಂದ 18 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲಸಿಕೆ ಪಡೆಯಲು ವಿದ್ಯಾರ್ಥಿಗಳು ಸ್ವ-ಪ್ರೇರಣೆಯಿಂದ ಮುಂದೆ ಬರಬೇಕು, ಯಾವುದೇ ವಿದ್ಯಾರ್ಥಿ ಅಥವಾ ಪೋಷಕರು ಈ ಬಗ್ಗೆ ಆತಂಕಪಡಬೇಕಾಗಿಲ್ಲ, ಲಸಿಕೆ ಬಹಳ ಸುರಕ್ಷಿತವಾಗಿದ್ದು, ಲಸಿಕೆ ಹಾಕಿಸಿಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಮೊದಲ ಡೋಸ್ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಕೋವಿಡ್ ಮತ್ತು ಓಮಿಕ್ರಾನ್ ತಡೆಗಟ್ಟುವ ಉದ್ದೇಶದಿಂದಲೇ ಎಲ್ಲಾ ಕಿರಿಯ ವಯಸ್ಸಿನ ವಿದ್ಯಾರ್ಥಿಗಳಿಗೂ ಲಸಿಕೆ ನೀಡುವ ಅಭಿಯಾನ ರೂಪಿಸಲಾಗಿದೆ. ಕೇರಳ, ಮಹಾರಾಷ್ಟ್ರ, ಗೋವಾದಂತೆ ಓಮಿಕ್ರಾನ್ ವಿಪರೀತವಾಗಿ ಹೆಚ್ಚುತ್ತಿದ್ದು ಎಲ್ಲರೂ ಮುಂಜಾಗ್ರತೆ ವಹಿಸುವಂತೆ ಸಲಹೆ ನೀಡಿದರು.
ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ ಮಾತನಾಡಿ, ವಿಧ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಬೇಕಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ಇಳಿಮುಖವಾಗಿದೆ ಎಂಬ ಕಾರಣಕ್ಕೆ ಜನರು ಮಾಸ್ಕ್ ಮತ್ತು ಸಾಮಾಜಿಕ ಅಂತರದ ಬಗ್ಗೆ ಅಲಕ್ಷ್ಯ ಮಾಡಬಾರದು, ನಾಗರೀಕರು ಸ್ವಯಂ ಪ್ರೇರಿತವಾಗಿ ಮಾಸ್ಕ್ ಧರಿಸಬೇಕು. ದಂಡ ವಿಧಿಸುತ್ತಾರೆಂಬ ಭಯಕ್ಕೆ ಧರಿಸುವ ಬದಲು ಸ್ವ ಇಚ್ಚೆಯಿಂದ ಜಾಗೃತಿ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮವನ್ನು ಗ್ರಾಮಪಂಚಾಯಿತಿ ಅಧ್ಯಕ್ಷ ವೆಂಕಟೇಶ್ ಉದ್ಘಾಟಿಸಿದರು. ಶಾಲೆಯ ಬೋಧಕ ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….