ದೊಡ್ಡಬಳ್ಳಾಪುರ: ಕರೊನಾ ಹಾಗೂ ಒಮಿಕ್ರಾನ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶುಕ್ರವಾರ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿದ್ದು ಅಗತ್ಯ ಸೇವೆ ಹೊರತುಪಡಿಸಿ, ಉಳಿದೆಲ್ಲವೂ ಬಂದ್ ಆಗಲಿವೆ. ತುರ್ತು ಅಗತ್ಯ ಇದ್ದರೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಹಾಲು, ಔಷಧ, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಇತರ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ತುರ್ತು ಸೇವೆ ಹಾಗೂ ಸರಕಾರಿ ಸೇವೆಗಳಿಗೆ ಹೋಗುವವರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದಾಗಿದೆ. ಬಸ್ ಹಾಗೂ ರೈಲು ಸಂಚಾರ ವ್ಯವಸ್ಥೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಇರಲಿದ್ದು ಉಳಿದಂತೆ ಮೆಟ್ರೋ ಸೇವೆ ಸಹ ಬೆಂಗಳೂರಿನಲ್ಲಿ ಇರಲಿದೆ. ಹೊಟೇಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ. ಜತೆಗೆ ರೆಸಾರ್ಟ್, ವಸತಿ ಗೃಹಗಳನ್ನೂ ಬಂದ್ ಮಾಡಲು ಸೂಚನೆ ಹೊರಡಿಸಲಾಗಿದೆ.
ಮದ್ಯ ಮಾರಾಟ ನಿಷೇಧ: ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಘೋಷಿಸಿರುವ ವಾರಾಂತ್ಯದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸರಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆಂದು ವರದಿ ತಿಳಿಸಿದೆ.
ಈ ನಿಟ್ಟಿನಲ್ಲಿ ರಾತ್ರಿಯೇ ರಸ್ತೆಗಿಳಿದ ಪೊಲೀಸರು ರಸ್ತೆಯಲ್ಲಿ ಓಡಾಟ ನಡೆಸುತ್ತಿದ್ದ ವಾಹನಗಳ ತಡೆದು ಪ್ರಶ್ನಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಇನ್ಸ್‌ಪೆಕ್ಟರ್ ಸತೀಶ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಗೋವಿಂದ್ ತಾಲೂಕಿನ ವಿವಿಧೆಡೆ ಗಸ್ತು ನಡೆಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….