ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ನಮ್ಮ ನೀರು ನಮ್ಮ ಹಕ್ಕು ಹೆಸರಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಬೆಂಗಳೂರಿನ ನಿವಾಸಿ ಎ.ವಿ.ನಾಗೇಂದ್ರಪ್ರಸಾದ್ ಎಂಬುವರು ಪಾದಯಾತ್ರೆ ತಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಮನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಯಾವುದೇ ರಾಜಕೀಯ ಪಕ್ಷಗಳಿಗೆ ಮೆರವಣಿಗೆ, ಧರಣಿ ಹಾಗೂ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು ಹಾಗೂ ಮೇಕೆದಾಟು ಯೋಜನೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ಮುಂದುವರಿಸದಂತೆ ಕಾಂಗ್ರೆಸ್ ಪಕ್ಷವನ್ನು ನಿರ್ಬಂಧಿಸುವಂತೆ ಸರ್ಕಾರ, ರಾಮನಗರ ಜಿಲ್ಲಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಇತರ ಪ್ರಾಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ವಿಧಿಸಿರುವ ನಿರ್ಬಂಧಗಳ ನಡುವೆಯೂ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಜ.9ರಿಂದ 10 ದಿನಗಳ ಪಾದಯಾತ್ರೆ ಆರಂಭಿಸಿದೆ. ಇದರ ನೇತೃತ್ವವನ್ನು ಕೆಪಿಸಿಸಿ ಅಧ್ಯಕ್ಷ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಹಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಕಾರ್ಯಕರ್ತರು, ಮುಖಂಡರು, ಸಾಂಸ್ಕೃತಿಕ ತಂಡಗಳು ಸೇರಿ ಸಾವಿರಾರು ಮಂದಿ ಪಾಲ್ಗೊಳ್ಳುತ್ತಿದ್ದಾರೆ. ಇದರಿಂದ, ಕೋವಿಡ್ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ ಎಂದು ವರದಿ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….