ಬೆಂಗಳೂರು, (ಮೇ.28): ‘ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ನೀಡಿದ್ದ ಗುತ್ತಿಗೆ ಆಧಾರಿತ ನೌಕರಿಯನ್ನು ಮುಂದುವರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಂತಿ ಮಾಡುತ್ತೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.
‘ನೂತನ ಕುಮಾರಿ ಅವರಿಗೆ ಅನುಕಂಪದ ಆಧಾರದಲ್ಲಿ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೌಕರಿ ನೀಡಲಾಗಿತ್ತು. ಆ ನೌಕರಿಯಲ್ಲೇ ಅವರನ್ನು ಮುಂದುವರಿಸುವಂತೆ ಮುಖ್ಯಮಂತ್ರಿಯವರನ್ನು ವಿನಂತಿಸುತ್ತೇವೆ. ರಾಜ್ಯ ಸರ್ಕಾರ ಒಪ್ಪದಿದ್ದರೆ ಕೇಂದ್ರ ಸರ್ಕಾರದ ಅಧೀನದ ಯಾವುದಾದರೂ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುತ್ತೇವೆ’ ಎಂದು ಶನಿವಾರ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ನೂತನ ಕುಮಾರಿ ಅವರನ್ನು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು.
ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು. ನೂತನಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ಸ್ಥಳೀಯವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ನೀಡಲಾಗಿತ್ತು. ಅವರು ಅಕ್ಟೋಬರ್ 14ರಂದು ಕರ್ತವ್ಯಕ್ಕೆ ಹಾಜರಾಗಿದ್ದರು.
ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ, ಮುಖ್ಯಮಂತ್ರಿ ಸಚಿವಾಲಯದ ಹಿಂದಿನ ಎಲ್ಲ ಗುತ್ತಿಗೆ ನೇಮಕಾತಿಗಳು ರದ್ದುಗೊಂಡಿವೆ. ಅಂತೆಯೇ ನೂತನ ಕುಮಾರಿ ಅವರಿಗೂ ಕೆಲಸ ಕೈತಪ್ಪಿದೆ.
BJP ಆಕ್ರೋಶ: ಕಾಂಗ್ರೆಸ್ ಪಕ್ಷವೇ ಸಾಕಿ ಬೆಳೆಸಿದ ಪಿಎಫ್ಐ ಎಂಬ ಭಯೋತ್ಪಾದಕ ಸಂಘಟನೆಯ ಕೋಮು ದ್ವೇಷಕ್ಕೆ ಒಳಪಟ್ಟು, ಪಿಎಫ್‌ಐ ಗೂಂಡಾಗಳಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರು ಅವರ ಧರ್ಮಪತ್ನಿಗೆ ಜೀವನ ನಿರ್ವಹಣೆಗಾಗಿ ಅನುಕಂಪದ ಆಧಾರದಲ್ಲಿ ನಮ್ಮ ಸರ್ಕಾರ ಮಂಗಳೂರಿನ ಡಿ.ಸಿ. ಕಚೇರಿಯಲ್ಲಿ ಉದ್ಯೋಗ ಕಲ್ಪಿಸಿತ್ತು.
ಈಗ ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ ದ್ವೇಷದ ರಾಜಕೀಯವನ್ನು ಮುಂದುವರೆಸಿರುವುದು ಖಂಡನೀಯ. ಈ ಕೂಡಲೇ ಸರ್ಕಾರ ಉದ್ಯೋಗದಿಂದ ವಜಾ ಮಾಡುವ ಅಮಾನವೀಯ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸುತ್ತೇವೆ.
ಪಿಎಫ್ಐ ಕೈಗೊಂಬೆಯಂತೆ ಸಿದ್ದರಾಮಯ್ಯರವರ ಸರ್ಕಾರ ಕುಣಿಯುತ್ತಿರುವುದು ರಾಜ್ಯದ ದುರಂತ ಎಂದು ಟ್ವಿಟ್ ಮೂಲಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಕಾಂಗ್ರೆಸ್ ತಿರುಗೇಟು: ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ BJP Karnataka ಗೆ ನೀತಿ ನಿಯಮಗಳನ್ನು ಅಧ್ಯಯನ ಮಾಡಲು ಆಸಕ್ತಿ & ಸಮಯ ಇರಲು ಸಾಧ್ಯವೇ?
ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ,
ಬದುಕಿಗೆ ಶಾಶ್ವತ ದಾರಿ ತೋರಿಸದೆ ಇಂತಹ ಪೇಪರ್ ಚಾಕ್ಲೆಟ್ ನೀಡುವ ಮೂಲಕ ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಸಿಎಂ ಭರವಸೆ: ಇನ್ನು ಈ ಕುರಿತಂತೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರುನೇಮಕ ಮಾಡಲಾಗುವುದು ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….