ಬೆಂಗಳೂರು, (ಸೆ.23): ವಿಧಾನಸಭಾ ಚುನಾವಣೆ ವೇಳೆ ವರುಣ ಕ್ಷೇತ್ರದಲ್ಲಿ ಮತದಾರರಿಗೆ ಇಸ್ತ್ರಿ ಪೆಟ್ಟಿಗೆ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿದ್ದಾರೆನ್ನಲಾದ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಘಟಕವು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
‘ಈ ಕುರಿತು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಯೋಗಕ್ಕೆ ಮನವಿ ಮಾಡಿದ್ದೇವೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
‘ಸಿದ್ದರಾಮಯ್ಯ ಇಡೀ ದೇಶಕ್ಕೆ ನೀತಿ ಪಾಠ ಹೇಳುತ್ತಾರೆ. ನಾನೇ ಶ್ರೇಷ್ಠ ಎಂದೂ ಹೇಳಿಕೊಳ್ಳುತ್ತಾರೆ. ಆದರೆ ವರುಣ ಕ್ಷೇತ್ರದಲ್ಲಿ ಅವರೇ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂದರು.
‘ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆಗಳನ್ನು ಮತ್ತು ಮನೆ ಮನೆಗಳಿಗೆ ಕುಕ್ಕರ್‌ಗಳನ್ನು ಕೊಟ್ಟಿದ್ದೇವೆ. ಜತೆಗೆ ಹಣವನ್ನೂ ಕೊಟ್ಟಿದ್ದೇವೆ ಎಂದು ಯತೀಂದ್ರ ಅವರೇ ಭಾಷಣದಲ್ಲಿ ಒಪ್ಪಿಕೊಂಡಿದ್ದಾರೆ. ಆ ವಿಡಿಯೊ ತುಣುಕು ಎಲ್ಲೆಡೆ ಲಭ್ಯವಿದೆ‘ ಎಂದು ಹೇಳಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….