ಬೆಂಗಳೂರು, (ಜ.19); ಕಾಟೇರ ಸಿನಿಮಾ ಯಶಸ್ಸಿನ ಸಂಭ್ರಮದಲ್ಲಿರುವ ನಟ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳಿಗೆ ಮತ್ತೊಂದು ಸಂಭ್ರಮಕ್ಕೆ ದಿನ ಗಣನೆ ಆರಂಭವಾಗಿದೆ.
ಫೆಬ್ರುವರಿ 16ರಂದು ನಟ ದರ್ಶನ್ ಅವರ ಜನ್ಮದಿನ ಬರಲಿದ್ದು, ಈ ದಿನದಂದು ಚಾಲೆಜಿಂಗ್ ಸ್ಟಾರ್ ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ್ದಾರೆ.
ಈ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, ‘ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ. ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ. ಅದೇ ಹಣದಲ್ಲಿ ಈ ವರ್ಷವೂ ಸಹ ನಿಮ್ಮ ಕೈಲಾದ ಅಕ್ಕಿ ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನ್ನು ಒಗ್ಗೂಡಿಸಿ ಸೇರಿಸಬೇಕಾದ ಅನಾಥಾಶ್ರಮ ವೃದ್ಧಾಶ್ರಮಗಳಿಗೆ ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನನ್ನದು ಎಂದಿದ್ದಾರೆ.
ಇದೇ ವೇಳೆ ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಮನೆಯ ಅಕ್ಕ-ಪಕ್ಕದ ನಿವಾಸಿಗಳಿಗೆ ನಿಮ್ಮಿಂದ ತೊಂದರೆಯಾಗುವುದು, ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು, ಹೂವು ಕುಂಡಗಳನ್ನು ಬೀಳಿಸುವುದು ಹಾಗೂ ಅವರ ಸ್ವತ್ತುಗಳಿಗೆ ಹಾನಿ ಮಾಡುವುದು ಇಂತಹ ಅನುಚಿತ ವರ್ತನೆ ನಡೆಯಬಾರದು.
ನನ್ನ ಬಗ್ಗೆ ಇಷ್ಟೆಲ್ಲ ಪ್ರೀತಿ ಅಭಿಮಾನ ಇಟ್ಟಿರುವ ನೀವೆಲ್ಲ ಈ ನನ್ನ ಕೋರಿಕೆಯನ್ನು ನಡೆಸಿಕೊಡುವಿರಿ ಎಂದು ನಂಬಿರುತ್ತೇನೆ. ಹಾಗು ಸಂಘದ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿ ವರ್ಗದವರಿಗೆ ಸಹಕರಿಸಬೇಕೆಂದು ವಿನಂತಿಸುತ್ತೇನೆ ಎಂದು ದರ್ಶನ್ ಬರೆದುಕೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….