ಹೊಸದಿಲ್ಲಿ, (ಫೆ.08); ಕಮಲ-ದಳ ಮೈತ್ರಿ ಬೆನ್ನಲ್ಲೇ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಹಾಲಿ ಸಂಸದೆ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂಬ ವದಂತಿ ಬೆನ್ನಲ್ಲೇ ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಅತ್ತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಂಗಪುರ್ ಪ್ರವಾಸದಲ್ಲಿರುವಾಗಲೇ ಇಂದು ಸುಮಲತಾ ಅಂಬರೀಶ್ ಅವರು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ಕಳೆದ ಬಾರಿ ಪಕ್ಷೇತರವಾಗಿ ಗೆದ್ದು ಬಿಜೆಪಿಗೆ ಬೆಂಬಲ ಸೂಚಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿಯ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ರಾಷ್ಟ್ರೀಯ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಬಳಿಕ ಈ ಕುರಿತು ಎಕ್ಸ್ ನಲ್ಲಿ ಟ್ವಿಟ್ ಮಾಡಿರುವ ಸುಮಲತಾ ಅವರು, ಜೆ.ಪಿ.ನಡ್ಡಾ ಹಾಗೂ ಬಿ.ಎಲ್. ಸಂತೋಷ್ ಅವರನ್ನು ಅನೌಪಚಾರಿಕವಾಗಿ ಭೇಟಿ ಮಾಡಿ ಮಂಡ್ಯ ಕ್ಷೇತ್ರ ಹಾಗೂ ಲೋಕಸಭಾ ಚುನಾವಣೆ ಕುರಿತು ಚರ್ಚೆ ನಡೆಸಿದ್ದೇನೆ. ಅವರು ತಮ್ಮ ಅಮೂಲ್ಯ ಸಮಯವನ್ನು ನೀಡಿ, ನನ್ನ ಮಾತುಗಳನ್ನು ಆಲಿಸಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ.
ಇತ್ತೀಚೆಗಷ್ಟೇ ಸುಮಲತಾ ಅವರು ಮಂಡ್ಯ ಕ್ಷೇತ್ರದ ಮೊದಲ ಬಿಜೆಪಿ ಸಂಸದೆಯಾಗಬೇಕೆಂಬ ಆಸೆ ವ್ಯಕ್ತಪಡಿಸಿದ್ದು, ಬಹಿರಂಗವಾಗಿಯೇ ಬಿಜೆಪಿ ಟೆಕೆಟ್ ಗೆ ಬೇಡಿಕೆ ಇಟ್ಟಿದ್ದರು. ಮತ್ತೊಂದು ಕಡೆಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಈ ಕ್ಷೇತ್ರದಿಂದ ಕಣಕ್ಕೆ ಇಳಿಯಬೇಕು ಎಂದು ಅವರ ಬೆಂಬಲಿಗರು ಬೇಡಿಕೆ ಇಟ್ಟಿದ್ದಾರೆ.
ಈ ಇಬ್ಬರ ನಡುವೆ ಬಿಜೆಪಿ ನಾಯಕರು ಮಂಡ್ಯ ಕ್ಷೇತ್ರವನ್ನು ಯಾರ ಕೈಗೆ ಒಪ್ಪಿಸಿದರೂ ಲೋಕಸಭೆ ಚುನಾವಣೆ ದೊಡ್ಡ ಸಮರಕ್ಕೆ ನಾಂದಿಯಾಗಬಹುದು ಎನ್ನಲಾಗುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….