ಬೆಂಗಳೂರು, (ಫೆ.15): ಹೊಸ ರೇಷನ್ ಕಾರ್ಡ್ ಗಾಗಿ ರಾಜ್ಯಾದ್ಯಂತ ಭಾರೀ ಬೇಡಿಕೆಯಿದ್ದು, ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆ ಶಾಸಕಿ ನಯನಾ ಮೋಟಮ್ಮ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ಕೇಳಿದ ಪ್ರಶ್ನೆಗೆ ಸಚಿವ ಮುನಿಯಪ್ಪ ಉತ್ತರ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಹಲವರ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆ ಜೊತೆ ಲಿಂಕ್ ಆಗಿಲ್ಲ. ಇದರಿಂದ ಐದು ಕೆಜಿಯ ಅಕ್ಕಿಯ ಹಣ ಹಲವು ಫಲಾನುಭವಿಗಳಿಗೆ ಕೆಲವು ತಿಂಗಳಿಂದ ತಲುಪುತ್ತಿಲ್ಲ. ಈ ಹಣ ಇಂತಹ ಫಲಾನುಭವಿಗಳಿಗೆ ಕೊಡುತ್ತಿದ್ದೀರಾ? ಇಲ್ವಾ? ಎಂದು ಪ್ರಶ್ನಿಸಿದರು.
ಇದಕ್ಕೆ ದ್ವನಿ ಗೂಡಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಬಿಪಿಎಲ್ ಕಾರ್ಡ್ ಕೊಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಿದೆ. ಸರ್ವರ್ ಡೌನ್ ಅದೂ ಇದೂ ಸಮಸ್ಯೆ ಅಂತ ಹೇಳುತ್ತಿದ್ದೀರಿ. ಐದು ಗ್ಯಾರಂಟಿಗಳಿಗೆ ಜನರ ಸಂಖ್ಯೆ ಹೆಚ್ಚಾಗಬಾರದು ಅಂತ ಬಿಪಿಎಲ್ ಕಾರ್ಡ್ ಕೊಡುತ್ತಿಲ್ವಾ? ಇದುವರೆಗೆ ಎಷ್ಟು ಬಿಪಿಎಲ್ ಕೊಟ್ಟಿದ್ದೀರಿ ತಿಳಿಸಿ ಎಂದರು.
ಇದಕ್ಕೆ ಉತ್ತರ ನೀಡಿದ ಸಚಿವ ಮುನಿಯಪ್ಪ, ಮಾರ್ಚ್ 31ರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಈಗಾಗಲೇ ಸಲ್ಲಿಕೆ ಆಗಿದ್ದು, ಬಾಕಿ ಇರುವ 2500 ಅರ್ಜಿ ವಿಲೇವಾರಿಗೆ ಸದಸ್ಯರಿಂದ ಒತ್ತಾಯ ಕೇಳಿಬಂತು. ಇದಕ್ಕೆ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಾರ್ಚ್ 31ರ ಒಳಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಪಡಿತರ ಚೀಟಿ ಇಲ್ಲದೆ ವಿವಿಧ ಸರ್ಕಾರಿ ಸೌಲಭ್ಯ ಪಡೆಯಲು ತೊಂದರೆಯಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪಡಿತರ ಕಾರ್ಡ್ ಇಲ್ಲದಿದ್ದರೆ ಸೌಲಭ್ಯದಿಂದ ವಂಚನೆ ಆಗುತ್ತಾರೆ ಎಂದು ಸದಸ್ಯರು ಸರ್ಕಾರದ ಗಮನ ಸೆಳೆದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….