ಬೆಂಗಳೂರು, (ಮಾ.4): ರಾಜ್ಯಸಭೆ ಚುನಾವಣೆ ಫಲಿತಾಂಶದ ವೇಳೆ ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆಂದು ಖಾಸಗಿ ಸುದ್ದಿವಾಹಿನಿಗಳು ವರದಿ ಮಾಡಿವೆ.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪಕ್ಕೆ ಕುರಿತಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ಈಗ ದೆಹಲಿ ಮೂಲದ ಇಲ್ತಾಜ್, ಆರ್.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ.
ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆಂದು ವರಿಯಾಗಿದೆ.
ಈ ಕುರಿತಂತೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ.
FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ?
ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು.
ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು.
ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಎಚ್ಚರಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….