ದಾವಣಗೆರೆ, (ಮೇ.16): ಮದುವೆಯಾಗಿ ನಾಲ್ಕು ವರ್ಷವಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಂತೋಷ್ ಕುಮಾರ್ (35 ವರ್ಷ) ಎಂದು ಗುರುತಿಸಲಾಗಿದೆ.
ಮೃತ ಸಂತೋಷ್ ಕುಮಾರ್ ವೈವಾಹಿಕ ಮದುವೆಯಾಗಿ ನಾಲ್ಕು ವರ್ಷಗಳಾಗಿತ್ತು. ಆದರೆ ಇಷ್ಟು ವರ್ಷಗಳಾದರೂ ಮಕ್ಕಳಾಗಲಿಲ್ಲ ಎಂಬ ಕೊರಗಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಸಂತೋಷ್ ದೊಡ್ಡಮಲ್ಲಾಪುರ ಗ್ರಾಮದ ನಿವಾಸಿಯಾಗಿದ್ದು, ಅವರ ಪತ್ನಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲೇ ಮನೆ ಮಾಡಿಕೊಂಡು ಅಲ್ಲಿಯೇ ವಾಸವಾಗಿದ್ದರು. ರಜೆ ದಿನಗಳಲ್ಲಿ ದೊಡ್ಡಮಲ್ಲಾಪುರ ಗ್ರಾಮಕ್ಕೆ ಆಗಮಿಸುತ್ತಿದ್ದರು.
ಮೇ 7ಕ್ಕೆ ನಡೆದ ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಸಂತೋಷ್ ತಮ್ಮ ಗ್ರಾಮಕ್ಕಾಗಮಿಸಿದ್ದರು. ಮತ ಚಲಾಯಿಸಿ ಮರಳಿ ಬೆಂಗಳೂರಿಗೆ ತೆರಳದೇ ಸ್ವಗ್ರಾಮದಲ್ಲೇ ಕುಟುಂಬಸ್ಥರೊಂದಿಗೆ ಉಳಿದುಕೊಂಡಿದ್ದರು.
ಮನೆಯಲ್ಲಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸಂತೇಬೆನ್ನೂರು ಪೊಲೀಸ್ ಠಾಣೆಯ ಎಸ್ಐ ಮಾಹಿತಿ ನೀಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡು ಎರಡು ದಿನಗಳ ಬಳಿಕ ಮನೆಯಿಂದ ವಾಸನೆ ಬರುತ್ತಿರುವುದನ್ನು ಗಮನಿಸಿದಾಗ ಶವ ಪತ್ತೆಯಾಗಿದೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಸಂತೇಬೆನ್ನೂರು ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇದು ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ. ಈಗಾಗಲೇ ಇದರ ಸಂಬಂಧ ಯುಡಿಆರ್ ನಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಸಂತೇಬೆನ್ನೂರು ಎಸ್ಐ ದೀಪಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….