ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಜುಲೈ 1): ರೈತರಿಗೆ ಸಂಬಂಧಿಸಿದ ಕಂದಾಯ ಇಲಾಖೆಯ ಕೆಲಸ ಕಾರ್ಯಗಳಿಗೆ ಪ್ರಥಮ ಆದ್ಯತೆಯನ್ನು ನೀಡಿ, ಶೀಘ್ರವಾಗಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಮತ್ತು ಕರ್ನಾಟಕ ರಾಜ್ಯ ಕಂದಾಯ ಇಲಾಖಾ ಗ್ರಾಮ ಸಹಾಯಕ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ, 2024 ನೇ ಸಾಲಿನ ಕಂದಾಯ ದಿನಾಚರಣೆ ಮತ್ತು ಕಂದಾಯ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕಂದಾಯ ಇಲಾಖೆಯೂ ಎಲ್ಲ ಇಲಾಖೆಗಳ ಮಾತೃ ಆಗಿ ಕೆಲಸವನ್ನು ನಿರ್ವಹಣೆ ಮಾಡುತ್ತಿದೆ. ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಿರಿ. ತಾವುಗಳು ಕಛೇರಿ ಕೆಲಸದ ಜತೆಯಲ್ಲಿ ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ವಹಿಸಿ, ಆಗಾಗ್ಗೆ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಂದಾಯ ಅಧಿಕಾರಿಗಳು ಅಧಿಕಾರದಲ್ಲಿ ಇದ್ದೇನೆ ಅಂತಾ ಅಧಿಕಾರ ಚಲಾಯಿಸುವುದು ಬೇಡ. ಜನರಿಗೆ ಅಗತ್ಯ ಸೇವೆಯನ್ನು ಸಕಾಲದಲ್ಲಿ ನೀಡುವ ಮೂಲಕ ಸರ್ಕಾರಿ ಕೆಲಸದಲ್ಲಿದ್ದೇನೆ ಎನ್ನುವ ತೃಪ್ತಿ ಪಡಿಬೇಕು. ನಿಮ್ಮ ಸಮಸ್ಯೆ ಹಾಗೂ ಕುಂದುಕೊರತೆಗಳ ಮನವಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಈಗಾಗಲೇ ಗ್ರಾಮ ಲೆಕ್ಕಾಧಿಕಾರಿಗಳ ಕೆಲಸಕ್ಕೆ ಅಗತ್ಯ ಸವಲತ್ತುಗಳನ್ನು ವಿತರಿಸಲು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುದೀಪ್.ಡಿ ಮಾತನಾಡಿ, ಕಂದಾಯ ಇಲಾಖೆಯ ಕಛೇರಿ ಕೆಲಸಕ್ಕೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆ ನೌಕರರ ಪರ ಮನವಿ ಮಾಡಿಕೊಂಡರು.
ಇದಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಂದಾಯ ಇಲಾಖಾ ಕಛೇರಿಯಲ್ಲಿ ಸೇವೆ ಸಲ್ಲಿಸಿ, ಸೇವಾ ನಿವೃತ್ತಿಯಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸನ್ಮಾನಿಸುವ ಮೂಲಕ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಹಸೀಲ್ದಾರ್ ವಿದ್ಯಾವಿಭಾ ರಾಥೋಡ್, ಹೊಸಕೋಟೆ ತಹಶೀಲ್ದಾರ್ ವಿಜಯಕುಮಾರ್, ನೆಲಮಂಗಲ ತಹಶೀಲ್ದಾರ್ ಅಮೃತ ಅತ್ರೇಶ್ ಹೆಚ್.ಆರ್, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ರಘುಪತಿ ಬಿ.ಸಿ, ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಎಂ. ಸೇರಿದಂತೆ ಜಿಲ್ಲೆಯ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….