ನವದೆಹಲಿ, (ಆಗಸ್ಟ್ 23): ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಉಪಸ್ಥಿತರಿದ್ದರು.
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಚಿತ್ರವನ್ನು ಹಂಚಿಕೊಂಡಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಮಾತುಕತೆ ನಡೆದಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಾಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕುರಿತು ಮುಂದಿನ ಕಾನೂನು ನಡೆ ಬಗ್ಗೆ ಚರ್ಚಿಸಲಾಗಿದೆ. ಮುಡಾದಲ್ಲಿ ನನ್ನ ಪಾತ್ರವಿಲ್ಲ. ಕಾನೂನು ರೀತಿಯಲ್ಲಿ 14 ಸೈಟ್ ಪಡೆದಿದ್ದೇವೆ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿದ್ದಾರಂತೆ.
ಅಲ್ಲದೇ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಿಂದಿನ ಹಗರಣಗಳ ಕುರಿತಾಗಿ ಮತ್ತು ರಾಜ್ಯಪಾಲರ ಬಳಿ ದೋಸ್ತಿ ನಾಯಕರ ಕೆಲ ಪ್ರಾಸಿಕ್ಯೂಷನ್‌ಗೆ ಅನುಮತಿಗೆ ಬಾಕಿ ಇರುವ ಸಂಗತಿಗಳನ್ನು ರಾಜ್ಯ ನಾಯಕರು ವರಿಷ್ಠರಿಗೆ ವರದಿ ಮಾಡಿದ್ದಾರಂತೆ.
ಇನ್ನು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಖಂಡಿಸಿ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ನಡೆ ವಿರೋಧಿಸಿ ಕೈಗೊಂಡ ಸಂಪುಟ ನಿರ್ಣಯಗಳ ಬಗ್ಗೆ ವರಿಷ್ಠರಿಗೆ ರಾಜ್ಯ ನಾಯಕರು ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….