ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 01): ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ಹಾಗೂ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 5.56 ಕೋಟಿ ರೂಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ದೊಡ್ಡಬಳ್ಳಾಪುರ ಟೌನ್ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.
ನಂತರ ಮಾತನಾಡಿ ಅಧಿಕಾರಿಗಳ ಶ್ರಮ, ಕಾಯಕನಿಷ್ಠೆ ಹಾಗೂ ಪ್ರಾಮಾಣಿಕ ಪ್ರಯತ್ನದಿಂದಾಗಿ ದೊಡ್ಡಬಳ್ಳಾಪುರದ ತಾಲ್ಲೂಕು ಆಸ್ಪತ್ರೆಗೆ ರಾಷ್ಟ್ರ ಮಟ್ಟದ ಗರಿ ಲಭಿಸಿದೆ. ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಜಿಲ್ಲೆಗೆ ಮಾದರಿಯಾಗುವಂತೆ ಕಾರ್ಯನಿರರ್ವಹಿಸಬೇಕು.
ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ ಪರಿಪಾಲನೆ ಮಾಡಬೇಕು. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಮುಂಚೂಣಿಯಲ್ಲಿದೆ, ಈ ಸೇವೆ ಇದೇ ರೀತಿ ಮುಂದಿನ ದಿನಗಳಲ್ಲೂ ಮುಂದುವರೆಯಲಿ ಎಂದು ವೈದ್ಯಾಧಿಕಾರಿಗಳಿಗೆ ಅಭಿನಂದಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆಗೆ ಈಗಾಗಲೇ ಶಿಲಾನ್ಯಾಸ ರೂಪುಗೊಂಡಿದ್ದು, ಶೀಘ್ರವೇ ಮಂಜೂರಾತಿಗಾಗಿ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಉಪಯೋಗವಾಗಲಿದೆ. ದೊಡ್ಡಬಳ್ಳಾಪುರ ನಗರ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ಅಪಘಾತಗಳ ಸಂಭವ ಹೆಚ್ಚಾಗಿ ಕಂಡುಬರುತ್ತಿದೆ. ಇದರಿಂದಾಗಿ ಕೇಂದ್ರ ಸರಕಾರ ವತಿಯಿಂದ ಕ್ರಿಟಿಕಲ್ ಕೇರ್ ಯುನಿಟ್ ಸಹ ಸ್ಥಾಪಿತವಾಗಲಿದ್ದು, ಜನರಿಗೆ ಇದು ಉಪಯೋಗವಾಗಲಿದೆ.
ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸಾರ್ವಜನಿಕರಿಗೆ ಲಕ್ಷಾಂತರ ರೂಗಳ ಖರ್ಚು ತಪ್ಪಲಿದೆ ಎಂದು ಸಚಿವರು ಹೇಳಿದರು.
ಆರೋಗ್ಯ ಇಲಾಖೆಯ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಂಜೂರಾಗಿರುವ ವಿವಿಧ ಕಾಮಗಾರಿಗಳ ಮೊತ್ತ ಹಾಗೂ ವಿವರ: ಜಿಲ್ಲೆಯ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಗೆ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2,10,60,000 ರೂಗಳು ಹಾಗೂ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಕನಸವಾಡಿಗೆ ಮೂಲಭೂತ ಸೌಕರ್ಯಗಳ ಉನ್ನತೀಕರಣಕ್ಕಾಗಿ ಒಟ್ಟು 60,28,900 ಕೋಟಿ ರೂ. ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಡಬಳ್ಳಾಪುರಕ್ಕೆ ಮೂಲಸೌಕರ್ಯಗಳ ಉನ್ನತೀಕರಣಕ್ಕಾಗಿ ಒಟ್ಟು 61,10,000 ರೂ ಮತ್ತು
ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2,24,82,000 ಕೋಟಿ ರೂ ವೆಚ್ಚ ಸೇರಿ ಜಿಲ್ಲೆಗೆ ಮಂಜೂರಾಗಿರುವ ಒಟ್ಟು ಮೊತ್ತ ರೂ 5,56,80,900 ಕೋಟಿ ರೂ ಗಳಾಗಿರುತ್ತದೆ.
ಕಾರ್ಯಕ್ರಮದಲ್ಲಿ ಶಾಸಕ ಧೀರಜ್ ಮುನಿರಾಜು, ಗ್ಯಾರಂಟಿ ಯೋಜನಾ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಬಿ.ರಾಜಣ್ಣ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ನಗರಸಭೆ ಆಯುಕ್ತರಾದ ಕಾರ್ತಿಕ್ ಈಶ್ವರ್ ಸೇರಿದಂತೆ ನಗರಸಭಾ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….