ಚಿಕ್ಕಮಗಳೂರು, (ಸೆ.10): ಕರ್ತವ್ಯ ನಿರತ ವೈದ್ಯರ ಮೇಲೆ ಇಬ್ಬರು ಮಹಿಳೆಯರು ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಮೂಳೆ ತಜ್ಞರಾಗಿರುವ ಡಾ.ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ಅಲ್ಲದೆ ವೈದ್ಯರು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿರುವ ಆರೋಪ ಕೇಳಿಬಂದಿದೆ.
ವಿಡಿಯೋದಲ್ಲಿ ಇಬ್ಬರು ಬುರ್ಖಾ ಧರಿಸಿರುವ ಮಹಿಳೆಯರು ವೈದ್ಯರ ಕೊರಳ ಪಟ್ಟಿ ಹಿಡಿದು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅನೇಕ ಜನರು ಹಲ್ಲೆ ನಡೆದ ಸ್ಥಳದಲ್ಲಿದ್ದರು. ಘಟನೆಯ ಹಿನ್ನೆಲಯಲ್ಲಿ ಅಲ್ಲಿದ್ದ ಸಿಬ್ಬಂದಿಗಳು ವೈದ್ಯರ ಮೇಲೆ ಹಲ್ಲೆ ಮಾಡುತ್ತಿರುವುದನ್ನು ತಡೆಯಲು ಪ್ರಯತ್ನಿಸಿರುವುದು ವಿಡಿಯೋದಲ್ಲಿದೆ.
ಅದೇ ರೀತಿ ಘಟನೆಯ ಕುರಿತು ಸಿಟಿ ರವಿ ಖಂಡಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಅವರು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿ, ಡಾಕ್ಟರ್ ವೆಂಕಟೇಶ್ ಅವರ ಮೇಲೆ ಹಲ್ಲೆಯಾದ ಅಮಾನವೀಯ ಘಟನೆ ನಡೆದಿದೆ. ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಇಂತಹ ನೀಚ ಕೃತ್ಯ ಎಸಗಿದವರನ್ನು ಈ ಕೂಡಲೇ ಬಂಧಿಸಿ ವೈದ್ಯಕೀಯ ಸಿಬ್ಬಂದಿಗಳ ರಕ್ಷಣೆಗೆ ಕ್ರಮ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದಾರೆ.
ಡಿಜಿಪಿ ಅಲೋಕ್ ಮೋಹನ್ ಅವರೇ ತಾವು ಈ ಕೂಡಲೇ ಆರೋಪಿಗಳನ್ನು ಬಂಧಿಸಿ ವೈದ್ಯಕೀಯ ಸಿಬ್ಬಂದಿ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ವಿಶ್ವಾಸವಿಟ್ಟು ಕೆಲಸ ಮಾಡುವ ವಾತಾವರಣ ನಿರ್ಮಾಣ ಮಾಡಿ ಎಂದು ಒತ್ತಾಯಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….