ಬೆಂಗಳೂರು, (ಸೆ.10); ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದೆ, ಅಲ್ಲೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾಳೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಪ್ರಶಂಸೆಗೆ ಕಾರಣವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಬಾಲಕಿಯ ಸಮಯಪ್ರಜ್ಞೆ, ಧೈರ್ಯ ಶ್ಲಾಘಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.
ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಮನವಿ ಮಾಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsapp, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….</