ಬೆಂಗಳೂರು; ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಬಸವಳಿದಿರುವ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಒಂದು ವಾರದ ಕಾಲ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಬಿದ್ದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿ ರಾಜ್ಯದ 25 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಪ್ರತಿದಿನವೂ ಮಳೆಯ ಆರ್ಭಟ ಜೋರಾಗಿದೆ. ನಗರದಲ್ಲಿ ಇನ್ನೂ ಎರಡು ದಿನಗಳ ಕಾಲ ಕಾಲ ಭಾರೀ ಮಳೆಯಾಗಲಿದೆ. ಅಲ್ಲದೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಲಿದೆ.
ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.