ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಖ್ಯಾತ ನಟ ದರ್ಶನ್ ಅವರ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಜಾಮೀನು ಕೋರಿ ದರ್ಶನ್ ಪರ ವಕೀಲರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ಅರ್ಜಿಯ ಕುರಿತಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಅವರಿಗೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಮುಂದೂಡಿದೆ.
ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಅರ್ಜಿದಾರ ದರ್ಶನ್ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದಾರೆ. ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಎಂಆರ್ಐ ಸ್ಕ್ಯಾನ್ ಮಾಡಿಸಲಾಗಿದೆ. ಬೆನ್ನು ಹುರಿಯ ಸರ್ಜರಿ ಅಗತ್ಯವೆಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ಅನಾರೋಗ್ಯ ಕಾರಣಕ್ಕೆ ಜಾಮೀನು ಕೇಳುತ್ತಿದ್ದೇವೆ ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರ ದರ್ಶನ್ ಅವರ ವೈದ್ಯಕೀಯ ವರದಿ ನೀಡಲು ಸೂಚನೆ ನೀಡಿ ವಿಚಾರಣೆ ಮುಂದೂಡಿದೆ ಎಂದು ವರದಿಯಾಗಿದೆ.