ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಗ್ರಾಮದಲ್ಲಿ 10ನೇ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು
ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದ ಅಂಗವಾಗಿ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಬೆಳ್ಳಿ ಪಲ್ಲಕ್ಕಿಯ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಮಹಿಳೆಯರು ಕಳಶ ಹೊತ್ತು ಬೆಳ್ಳಿ ಪಲ್ಲಕ್ಕಿಯ ಮುಂದೆ ಹೆಜ್ಜೆ ಹಾಕಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡರು, ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ ಎಂದರು.
ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು. ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ ಎಂದರು.
ಶ್ರೀ ರಾಮನ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ ಎಂದರು.