ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ಕಾರಣ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ಸರಕಾರ ಮತ್ತು ಅರ್ಜಿದಾರರ ಪರ ವಕೀಲರ ವಾದ- ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿತು.
ವಿಚಾರಣೆ ವೇಳೆ ದರ್ಶನ್ ಪರ ವಾದ ಮಂಡಿಸಿದ ವಕೀಲರು ಜೈಲಿನ ಅಧಿಕಾರಿಗಳು ನೀಡಿರುವ ವರದಿಯನ್ನು ಪೀಠಕ್ಕೆ ವಿವರಿಸಿ, ದರ್ಶನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಳ್ಳಾರಿಯಲ್ಲಿ ಅವರಿಗೆ ಚಿಕಿತ್ಸೆ ಕೊಡಿಸುವುದಕ್ಕೆ ಸಾಧ್ಯವಾಗುವುದಿಲ್ಲ.
ಸರಕಾರಿ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕೇ ಎಂಬ ಬಗ್ಗೆ ಅನುಮತಿ ಪಡೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದರು.” ಚಿಕಿತ್ಸೆ ಪಡೆಯಲು ಮುಕ್ತ ಅವಕಾಶ: ತನ್ನ ವೆಚ್ಚದಲ್ಲಿ ತನಗೆ ನಂಬಿಕೆ ಹೊಂದಿರುವ ವೈದ್ಯರಿಂದ ಚಿಕಿತ್ಸೆ ಪಡೆ ಯುವುದಕ್ಕೆ ಮುಕ್ತ ಅವಕಾಶವಿದೆ.
ಸರಕಾರದ ವೆಚ್ಚದಲ್ಲಿ ಅಲ್ಲ. ಇಂತಹ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂಬ ಅಂಶವನ್ನು ಪ್ರಾಸಿಕ್ಯೂಷನ್ (ತನಿಖಾಧಿಕಾರಿಗಳು) ಪ್ರಶ್ನೆ ಮಾಡುವುದಕ್ಕೆ ಅವಕಾಶವಿಲ್ಲ. ವೈದ್ಯರ ಸೂಚನೆ ಯಂತೆ ಚಿಕಿತ್ಸೆಗೆ ಒಳಗಾಗದಿದ್ದಲ್ಲಿ ಮುಂದೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಅಲ್ಲದೆ, ಪ್ರಕರಣ ಸಂಬಂಧ ತನಿಖೆ ಪೂರ್ಣಗೊಂಡಿದ್ದು ಆರೋಪಪಟ್ಟಿಯನ್ನೂ ಸಲ್ಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಅರ್ಜಿದಾರರು ರೆಗ್ಯೂಲರ್ ಜಾಮೀನು ಕೇಳುತ್ತಿಲ್ಲ. ಸಾಮಾನ್ಯ ಜಾಮೀನು ಕೋರಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಪ್ರಸ್ತುತ ಆರೋಗ್ಯದ ದೃಷ್ಟಿಯಿಂದ ಮಧ್ಯಂತರ ಜಾಮೀನು ಕೋರುತ್ತಿದ್ದೇವೆ.
ಈ ರೀತಿಯ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಕೊಲೆ ಆರೋಪಿಯಾಗಿದ್ದರೂ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವೂ ಜಾಮೀನು ಮಂಜೂರು ಮಾಡಬಹುದು. ಹೀಗಾಗಿ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿದರು. ಅರ್ಜಿದಾರರಿಗೆ ಈ ಹಿಂದೆಯೂ ಸಮಸ್ಯೆ ಇದ್ದು, ಇದೀಗ ಸಮಸ್ಯೆ ಉಲ್ಬಣಗೊಂಡಿದೆ ಶಸ್ತ್ರಚಿಕಿತ್ಸೆ ಅತ್ಯಗತ್ಯ ಎಂದು ತಿಳಿಸಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಸ್.ವಿಶ್ವಜಿತ್ ಶೆಟ್ಟಿ ಅವರು ಇಂದು 6 ವಾರಗಳ ಜಾಮೀನು ಮಂಜೂರು ಮಾಡಿದ್ದಾರೆ.
ಇಂದೇ ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದಾರೆ.