ಬೆಂಗಳೂರು: ತಮಿಳುನಾಡು, ಆಂದ್ರಪ್ರದೇಶವನ್ನು ತೀವ್ರವಾಗಿ ಕಾಡುತ್ತಿರುವ ಫೆಂಗಲ್ ಸೈಕ್ಲೋನ್ (Cyclone Fengal) ಪರಿಣಾಮ ಕರ್ನಾಟಕದ ಮೇಲೂ ಬಿದ್ದಿದೆ.
ಚಂಡಮಾರುತದ ಪರಿಣಾಮ ಬೆಂಗಳೂರು, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅನೇಕ ಕಡೆಗಳಲ್ಲಿ ಮಳೆಯಾಗಿದೆ.
ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ನಾಳೆ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಒಂದು ದಿನ ರಜೆ ನೀಡಲಾಗಿದೆ. ಉಳಿದಂತೆ ಯಾವ ಜಿಲ್ಲೆಯಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ.
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ ಮತ್ತು ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ.
ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಡಿಸಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.