ತಿರುಪತಿ: ಪ್ರಸಿದ್ದ ತಿರುಪತಿ (Tirupati) ದೇವಸ್ಥಾನದ ವೈಕುಂಠದ್ವಾರ ದರ್ಶನದ ಟೋಕನ್ ಪಡೆದುಕೊಳ್ಳುವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.
ಮೃತರಲ್ಲಿ ಮೂವರು ಮಹಿಳೆಯರಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಟಿಕೆಟ್‌ಗಾಗಿ ಸುಮಾರು 4 ಸಾವಿರಕ್ಕೂ ಹೆಚ್ಚು ಭಕ್ತರು ಬುಧವಾರ ಬೆಳಗ್ಗೆಯಿಂದಲೇ ವಿವಿಧ ಟಿಕೆಟ್ ಕೇಂದ್ರಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು.
ಭಾರೀ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ವಿಷ್ಣು ನಿವಾಸದಲ್ಲಿ ‘ವೈಕುಂಠ ದ್ವಾರ ಸರ್ವ ದರ್ಶನ’ ಟೋಕನ್ ಪಡೆಯಲು ಯತ್ನಿಸಿದಾಗ ನೂಕುನುಗ್ಗಲು ಉಂಟಾಗಿದೆ. ಶ್ರೀನಿವಾಸಂ, ಬೈರಾಗಿಪಟೇಡ ರಾಮ ನಾಯ್ಡು ಶಾಲೆ, ಸತ್ಯನಾರಾಯಣಪುರಂ ಮುಂತಾದ ಕಡೆ ಕಾಲ್ತುಳಿತ ಸಂಭವಿಸಿದೆ.
ಸ್ಥಳದಲ್ಲಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರವಾಗಿವೆ.
ಘಟನೆಗೆ ಸಂಬಂಧಿಸಿ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಆರ್.ನಾಯ್ಡು ಅವರು ತುರ್ತು ಸಭೆ ನಡೆಸಿದ್ದಾರೆ.
ಕಾಲ್ತುಳಿತಕ್ಕೆ ಕಾರಣವೇನು?
ಗುರುವಾರ ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್ ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಹೊರಗೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದು ಮೂಲದ ಪ್ರಕಾರ, ಗುರುವಾರ ಮುಂಜಾನೆ 5 ಗಂಟೆಯ ಬದಲು ಮಧ್ಯರಾತ್ರಿ 12 ಗಂಟೆಯಿಂದಲೇ ಟಿಕೆಟ್ ವಿತರಣೆ ಆರಂಭವಾಗಲಿದೆ ಎನ್ನುವ ಮಾಹಿತಿ ಹರಿದಾಡಿದೆ. ಈ ವೇಳೆ ಸಾವಿರಾರು ಮಂದಿ ಏಕಕಾಲಕ್ಕೆ ಕೌಂಟರ್ ಬಳಿ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ ಎಂಬ ಮಾಹಿತಿ ವರದಿಯಾಗಿದೆ.