ನವದೆಹಲಿ: ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಥಚಿತ್ರ (tableau) ದೇಶದ ಗಮನ ಸೆಳೆದಿದೆ. ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಿ ಮನಸೂರೆಗೊಳಿಸಿದೆ.
ಕರ್ನಾಟಕದ ಟ್ಯಾಬ್ಲೊ ದೆಹಲಿಯ ಕರ್ತವ್ಯಪಥದಲ್ಲಿ ಸಾಗುವುದರೊಂದಿಗೆ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ ಹಾಗೂ ಸಹಬಾಳ್ವೆಯನ್ನು ಟ್ಯಾಬೋ ಪ್ರತಿಪಾದಿಸಿದೆ.
ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿದ ಐತಿಹಾಸಿಕ ದೇವಾಲಯಗಳ ಸ್ತಬ್ಥಚಿತ್ರ ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿದೆ.
ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಈ ಬಾರಿಯ ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿದೆ.
ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಿದೆ.
ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ
ಕರ್ನಾಟಕಕ್ಕೆ ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರವು ಅತ್ಯಂತ ಸ್ಮರಣೀಯವಾದುದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮಗಳ ದೇವಾಲಯಗಳಿವೆ.
ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ ಮುನ್ನಡೆದರು. ಇನ್ನುಳಿದ 10 ಮಂದಿ ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಕಾಣಿಸಿಕೊಂಡಿದ್ದಾರೆ.
ಸ್ತಬ್ಥಚಿತ್ರದಲ್ಲಿ
ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ.
ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು.
ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.
ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ.
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.
ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ.
ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ.
ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ
ತೀವ್ರ ಪೈಪೋಟಿ : ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ.
ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯ 15ಕ್ಕೆ ಇಳಿಸಿದೆ. ಇದು ತೀವ್ರ ಪೈಪೋಟಿಗೆ ಕಾರಣವಾಗಿತ್ತು.
ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 15 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ಪ್ರಶಸ್ತಿಗಳ ಸರಮಾಲೆ
2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‌ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು.
2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ಗಾರಗಿ ಪ್ರಶಸ್ತಿ ಲಭಿಸಿತ್ತು.
ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ.