ಬೆಂಗಳೂರು: ವಿಕಸಿತ ಭಾರತ ನಿರ್ಮಾಣದ ನಿಟ್ಟಿನಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸುವ ದೂರದೃಷ್ಟಿಯ ಬಜೆಟ್ (UnionBudget2025) ಅನ್ನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಈ ಬಜೆಟ್ ಮಂಡಿಸಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಜೀ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಪ್ರಮುಖವಾಗಿ ನಮ್ಮ ರೈತರು, ಮಧ್ಯಮ ವರ್ಗ, ಸಣ್ಣ ಮತ್ತು ಮಾಧ್ಯಮ ವಲಯದ ಉದ್ಯಮಗಳ ಸಬಲೀಕರಣದ ಸಾಕಾರದ ಗುರಿ ಸಾಧಿಸಲು ಈ ಬಜೆಟ್ (UnionBudget2025) ಉಪಯುಕ್ತವಾಗಲಿದೆ.
ಪ್ರಗತಿನಿಷ್ಠ ಮಾರ್ಗಸೂಚಿ, ರಫ್ತಿಗೆ ಆದ್ಯತೆ, ಹೂಡಿಕೆ ಸ್ನೇಹಿ ಮತ್ತು ಸುಧಾರಣಾ ಕ್ರಮಗಳು, ಪರಿವರ್ತನೆಯ ನೀತಿಗಳ ಮೂಲಕ ಸಶಕ್ತ, ಸಮಗ್ರ ಅಭಿವೃದ್ಧಿಯನ್ನು ಬಜೆಟ್ 2025-26 ಖಾತರಿಪಡಿಸುತ್ತಿದೆ. ಇದು ಉದ್ಯಮಸ್ನೇಹಿ ಬಜೆಟ್ ಆಗಿದ್ದು, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಪ್ರಾಮುಖ್ಯತೆ ಒದಗಿಸಿದೆ.
ವಿಶೇಷವಾಗಿ, ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ, ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ, ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷ ರೂ. ನಿಂದ 5 ಲಕ್ಷ ರೂ. ಗೆ ಹೆಚ್ಚಿಸಲಾಗಿರುವುದನ್ನು ಸ್ವಾಗತಿಸುತ್ತೇನೆ.
ಜೊತೆಗೆ ಯುವಶಕ್ತಿ ಹಾಗೂ ಮಹಿಳಾ ಸಬಲೀಕರಣ, ಕೇಂದ್ರ-ರಾಜ್ಯ ಸಹಯೋಗಗಳಿಗೆ ಮತ್ತಷ್ಟು ಪ್ರಾಮುಖ್ಯತೆ ನೀಡಲಾಗಿದ್ದು, ನಗರಾಭಿವೃದ್ಧಿ ಮತ್ತು ಮೂಲಸೌಕರ್ಯಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.
2025ರಲ್ಲಿ ಕ್ಷಯರೋಗ ನಿರ್ಮೂಲನೆಯ ಗುರಿ ಸೇರಿದಂತೆ ಆರೋಗ್ಯಸೇವಾ ವಲಯಕ್ಕೆ ಕಾಯಕಲ್ಪ ಒದಗಿಸಲಾಗಿದೆ. ಹೊಸ ಪದ್ಧತಿಯಡಿಯಲ್ಲಿ ಬಂಡವಾಳ ಲಾಭದಂತಹ ವಿಶೇಷ ಆದಾಯ ಹೊರತುಪಡಿಸಿ, 12 ಲಕ್ಷ ರೂ. ಆದಾಯದವರೆಗೆ ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿಯ ಕ್ರಮ ಮಾಧ್ಯಮ ವರ್ಗಗಳಿಗೆ ಹೆಚ್ಚಿನ ಆರ್ಥಿಕ ಬಲವನ್ನು ನೀಡಲಿದೆ.
ಒಟ್ಟಿನಲ್ಲಿ ಈ ಸಾಲಿನ ಬಜೆಟ್ ಸ್ವಾವಲಂಬನೆ, ಪ್ರಗತಿ ಮತ್ತು ಜಾಗತಿಕ ಆರ್ಥಿಕತೆಯ ಮುಂಚೂಣಿಯಲ್ಲಿ ಮುನ್ನಡೆಯಲು ಭಾರತವನ್ನು ಸಶಕ್ತಗೊಳಿಸಿದೆ ಎಂದಿದ್ದಾರೆ.