ವಾರಾಣಸಿ; ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ವಾಹನವೊಂದು ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ (Accident) ಐವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತ ಐವರಲ್ಲಿ ಪತಿ, ಪತ್ನಿ ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.
ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಮಿರ್ಜಾಮುರಾದ್ ಠಾಣಾ ಪೊಲೀಸರು ಮಾಹಿತಿ ತಿಳಿಸಿದ್ದಾರೆ.
ಸಂತೋಷ್ ಕುಮಾರ್ (43 ವರ್ಷ), ಸುನೀತಾ(35 ವರ್ಷ), ನೀಲಮ್ಮ(60 ವರ್ಷ) ಗಣೇಶ್ ಮತ್ತು ಶಿವಕುಮಾರ್ ಮೃತ ದುರ್ದೈವಿಗಳು.
ಕವಿತಾ, ಅನಿತಾ, ಲೀಲಾವತಿ, ಸಾಯಿನಾಥ್, ಭಗವಾನ್ ಮತ್ತು ಸುಲೋಚನಾ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಐವರು ಒಂದೇ ಕುಟುಂಬದವರು ಎಂದು ಹೇಳಲಾಗುತ್ತಿದೆ. ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ವಾಹನವು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಯಿಂದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅಸುನೀಗಿದ್ದಾರೆ. ಆರು ಜನ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಕುಂಭಮೇಳಕ್ಕೆ ತೆರಳಿ ವಾಪಸ್ ಆಗುತ್ತಿದ್ದ ಬೀದರ್‌ನ ಲಾಡಗೇರಿ ಬಡಾವಣೆಯ 14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಇದಾಗಿದೆ ಎಂದು ಹೇಳಲಾಗುತ್ತಿದೆ. ಅಯೋಧ್ಯೆ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.