ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (Bank Janardhan) ಅವರು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ
ಭಾನುವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ಪೋಷಕ ಕಲಾವಿದರು 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಜನಾರ್ಧನ್ ಅವರು ತಮ್ಮವಿದ್ಯಾಭ್ಯಾಸವನ್ನೆಲ್ಲಾ ಮುಗಿಸಿದ್ದು ಕೂಡ ಬೆಂಗಳೂರಿನಲ್ಲಿಯೇ.
1985ರಲ್ಲಿ ತೆರೆಕಂಡ ‘ಪಿತಾಮಹ’ ಚಿತ್ರದ ಮೂಲಕ ನಟನೆ ಆರಂಭಿಸಿದ ಜನಾರ್ದನರವರು ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು.
ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದರು, ಹಾಸ್ಯ ನಟರಾಗಿ ತಮ್ಮದೇ ಆದ ಛಾಪು ಮೂಡಿಸಿಕೊಂಡಿದ್ದರು.
ಉಪೇಂದ್ರ ನಿರ್ದೇಶನದ ‘ತರ್ಲೆ ನನ್ ಮಗ, ‘ಶ್’ ಹಾಗೂ ಜಗ್ಗೇಶ್ ಅವರ ಬಹುತೇಕ ಚಿತ್ರಗಳು ಮತ್ತು ‘ಬೆಳ್ಳಿಯಪ್ಪ ಬಂಗಾರಪ್ಪ’, ‘ಗಣೇಶ ಸುಬ್ರಮಣ್ಯ’, ‘ಕೌರವ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗಮನಾರ್ಹ ಪಾತ್ರಗಳಲ್ಲಿ ಕಾಣಿಸಿಕೊಂಡ ಇವರು, ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಹೃದಯಾಘಾತದಿಂದ ಚೇತರಿಕೆ ಕಂಡರು ಅನಾರೋಗ್ಯ ಕಾಡುತ್ತಿತ್ತು.
ಈ ಹಿರಿಯ ಕಲಾವಿದರಿಗೂ ನಟ ವಿನೋದ್ ರಾಜ್ ಪ್ರತಿ ತಿಂಗಳು ಆಸ್ಪತ್ರೆ ಖರ್ಚಿಗಾಗಿ ತಮ್ಮ ಕೈಲಾದ ಸೇವೆ ಮಾಡುತ್ತಿದ್ದರು.
ಬ್ಯಾಂಕ್ ಜನಾರ್ಧನ್ ಮರಳಿಬಾರದ ಲೋಕಕ್ಕೆ ತೆರಳಿದ್ದಾರೆ.