ತಿರುಪತಿ (Tirupati): ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಂದು ತಿರುಪತಿ ಕಾಲ್ತುಳಿತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರು ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವುದಾಗಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದಾಗಿ ಹಾಗೂ ಕರ್ತವ್ಯಲೋಪ ಎಸಗಿದ ಡಿಎಸ್‌ಪಿ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ತಿರುಪತಿಯಲ್ಲಿ ಆಡಳಿತ ಮತ್ತು ಮೇಲ್ವಿಚಾರಣಾ ಕಾರ್ಯವಿಧಾನಗಳಲ್ಲಿ ಕೆಲವು ಲೋಪದೋಷಗಳು ಅಥವಾ ಸೋರಿಕೆಗಳನ್ನು ಅವರು ಗಮನಿಸಿರುವುದಾಗಿ ತಿಳಿಸಿದ್ದಾರೆ.
ಇನ್ನು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ನಾಯ್ಡು ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸುವುದಾಗಿ ಹೇಳಿದರು.

ಬುಧವಾರ ರಾತ್ರಿ ನಡೆದ ಕಾಲ್ತುಳಿತದಲ್ಲಿ ಆರು ಭಕ್ತರು ಸಾವನ್ನಪ್ಪಿದ್ದು ಸುಮಾರು 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್‌ಗಾಗಿ ನೂರಾರು ಭಕ್ತರು ಹರಸಾಹಸ ಪಟ್ಟಿದ್ದಾರೆ. ಜನವರಿ 10 ರಿಂದ ಪ್ರಾರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶಾದ್ಯಂತ ನೂರಾರು ಭಕ್ತರು ಆಗಮಿಸಿದ್ದರು.