ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸಂಸದ ಡಾ.ಕೆ ಸುಧಾಕರ್ (Dr K Sudhakar) ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ಗುಡುಗಿದ್ದಾರೆ.
ಈ ಮೂಲಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರಸ್ವರೂಪ ಪಡೆದಿದೆ. ಪಕ್ಷದ ಹಿರಿಯ ಮುಖಂಡರು ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗವಾಗಿಯೇ ಅಸಮಧಾನ ಹೊರಹಾಕುತ್ತಲೇ ಇದ್ದಾರೆ.
ಬಸನಗೌಡ ಪಾಟೀಲ ಯತ್ನಾಳ್, ರಮೇಶ್ ಜಾರಕಿಹೊಳಿ, ಶ್ರೀರಾಮುಲು ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರ ಸಂಸದ ಡಾ ಸುಧಾಕರ್ ಅವರು ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದು, ಜಿಲ್ಲಾಧ್ಯಕ್ಷ ನೇಮಕದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಲ್ಲದೆ ಲೋಕಸಭೆ ಚುನಾವಣೆ ವೇಳೆ ವಿಜಯೇಂದ್ರ ಬೆಂಬಲಿಗರಾದ ಹಾಲಿ ಬಿಜೆಪಿ ಶಾಸಕರು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದರು. ಟಿಕೆಟ್ ತಪ್ಪಿಸುವುದರಿಂದ ಹಿಡಿದು ಅನೇಕ ತೊಂದರೆ ನೀಡಿದರು ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಳಿಕ ತಮ್ಮನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ಬೇಸರ ವ್ಯಕ್ತಪಡಿಸಿದ್ದು, ನಿಮ್ಮ ನಾಯಕತ್ವದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಒಂದು ಸೀಟು ಗೆಲ್ಲಿ ನೋಡೋಣ ಎಂದು ವಿಜಯೇಂದ್ರಗೆ ಬಹಿರಂಗ ಸವಾಲು ಹಾಕಿದ್ದಾರೆ.
ಇದನ್ನೂ ಓದಿ; ತಾರಕಕ್ಕೇರಿದ ಬಿಜೆಪಿ ಬಣ ಬಡಿದಾಟ.. ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಂಸದ ಡಾ.ಕೆ ಸುಧಾಕರ್
ತಮಗೆ ಬೇಕಾದವರಿಗೆ, ಜೀ ಹೂಜೂರು ಎನ್ನುವವರಿಗೆ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷ ಮಾಡಿಕೊಂಡಿದ್ದಾರೆ. ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.