ದೊಡ್ಡಬಳ್ಳಾಪುರ : ಬೆಂಗಳೂರು ವೈದ್ಯಕೀಯ ಕಾಲೇಜಿನ ಸಮುದಾಯ ಔಷಧಿ ವಿಭಾಗದ ಮುಖ್ಯಸ್ಥ ಡಾ.ರಂಗನಾಥ್ ಅವರನ್ನು ಒಳಗೊಂಡ ಐದು ತಜ್ಞ ವೈದ್ಯರ ತಂಡ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲಾಡಳಿತವು ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿತು.
ತಂಡವು ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಿದ್ಯಾರ್ಥಿನಿಲಯದ ಕ್ವಾರಂಟೈನ್ ಕೇಂದ್ರ ಹಾಗೂ ಇಸ್ತೂರು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕ್ವಾರಂಟೈನ್ ಕೇಂದ್ರ, ಹನುಮಂತರಾಯನಪಾಳ್ಯ ಕಂಟೈನ್ಮೆಂಟ್ ವಲಯ, ದೊಡ್ಡಬಳ್ಳಾಪರ ನಗರ ಸಮುದಾಯ ಆರೋಗ್ಯ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಫೀವರ್ ಕ್ಲಿನಿಕ್, ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭೇಟಿ ನೀಡಿ ಪ್ರಯಾಣಿಕರಿಗೆ ನಡೆಸುತ್ತಿರುವ ಸ್ಕ್ರೀನಿಂಗ್ ಹಾಗೂ ಆರೋಗ್ಯ ತಪಾಸಣಾ ವ್ಯವಸ್ಥೆಯನ್ನು ಪರಿಶೀಲಿಸಿತು.
ಇದಕ್ಕು ಮುನ್ನ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ,ದೊಡ್ಡಬಳ್ಳಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮತ್ತಿತರರಿದ್ದರು.