ಬೆಂ.ಗ್ರಾ.ಜಿಲ್ಲೆ: ಸಿರಿ ಧಾನ್ಯಗಳನ್ನು ಉಪಯೋಗಿಸುವುದರಿಂದ ಉತ್ತಮ ಆರೋಗ್ಯದ ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದ್ದು, ಮರಳಿ ರೈತರು ಸಿರಿಧಾನ್ಯಗಳನ್ನು ಬೆಳೆಯಲು ಮುಂದಾಗುವಂತೆ ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಕರೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಡೋನಹಳ್ಳಿ ಇವರ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿಂದು ಏರ್ಪಡಿಸಲಾಗಿದ್ದ “ಕಿಸಾನ್ ಮೇಳ ಮತ್ತು ಸಿರಿಧಾನ್ಯಗಳ ಹಬ್ಬ-2021” ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಹಲವು ವರ್ಷಗಳ ಹಿಂದೆ ಕೃಷಿ ವಿಜ್ಞಾನಿಗಳ ಸಲಹೆ ಮೇರೆಗೆ ರಸಗೊಬ್ಬರವನ್ನು ಬಳಸಲು ಮುಂದಾದ ರೈತರು, ನಂತರ ಆಹಾರ ಉತ್ಪಾದನೆ ಹೆಚ್ಚಾದರೂ ಸಹ ಮಣ್ಣು ತನ್ನ ಸಾರವನ್ನು ಕಳೆದುಕೊಂಡು ಆಹಾರ ಧಾನ್ಯಗಳ ಪ್ರೋಟಿನ್ ಕಳೆದುಕೊಳ್ಳುತ್ತಿದ್ದು, ರೈತರು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಸಿರಿಧಾನ್ಯಗಳನ್ನು ಬೆಳೆಯುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು. ಅಲ್ಲದೆ, ಸಿರಿಧಾನ್ಯಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ ಎಂದು ತಿಳಿಸಿದರು.
ಅನುಭವದ ಆಧಾರದ ಮೇಲೆ ರೈತರು ಕಾರ್ಯನಿರ್ವಹಿಸುತ್ತಿದ್ದು, ರೈತರ ಸಾಂಪ್ರದಾಯಿಕ ಶೈಲಿಯ ಕೃಷಿಯ ಚಕ್ರವನ್ನು ಯಾವ ವಿಜ್ಞಾನಿಗಳು ಕಂಡುಹಿಡಿಯಲು ಸಾಧ್ಯವಿಲ್ಲ ಎಂದರು ಅಲ್ಲದೆ ಮೊದಲು ಮನೆ ಸದಸ್ಯರೆಲ್ಲರೂ ಸೇರಿ ಕೃಷಿ ಕಾರ್ಯ ಮಾಡುತ್ತಿದ್ದರು ಆದರೀಗ, ಕೃಷಿ ಕಾರ್ಯ ಮಾಡುವವರು ಕಡಿಮೆಯಾಗಿದ್ದಾರೆ ಎಂದು ಹೇಳಿದರು.
ಅತಿಯಾಗಿ ಬಳಸುತ್ತಿರುವ ರಸಗೊಬ್ಬರದಿಂದ ಪ್ರಸ್ತುತ ರೈತರು ಸಹ ಅನಾರೋಗ್ಯದಿಂದ ಬಳಲುತ್ತಿದ್ದು, ರೈತರು ಮರಳಿ ಸಿರಿ ಧಾನ್ಯಗಳನ್ನು ಬೆಳೆಯುವಂತಾಗಬೇಕು ಎಂದರು.
ಕೃಷಿ ಇಲಾಖೆ ಅಧಿಕಾರಿಗಳು ಸಿರಿ ಧಾನ್ಯಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು. ಸಿರಿ ಧಾನ್ಯಗಳ ಮಹತ್ವ, ಬೆಳೆಯುವ ರೀತಿಯನ್ನು ರೈತರಿಗೆ ತಿಳಿಸುವ ಮೂಲಕ ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದರಲ್ಲದೆ, ಸಿರಿ ಧಾನ್ಯಗಳಿಂದ ಹಲವು ರೀತಿಯ ಆಹಾರ ಖಾದ್ಯಗಳನ್ನು ತಯಾರಿಸಬಹುದಾಗಿದ್ದು ರೈತರಿಗೆ ಲಾಭದಾಯಕವಾಗಲಿದೆ ಎಂದು ಹೇಳಿದರು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ ರೈತರು ಬೆಳೆ ಬೆಳೆಯುವ ಮುನ್ನ ಮಣ್ಣಿನ ಪರೀಕ್ಷೆ ಮಾಡಿಸಿ ನಂತರ ಕೃಷಿ ಕಾರ್ಯ ಮಾಡಬೇಕು ಎಂದು ರೈತರಲ್ಲಿ ಮನವಿ ಮಾಡಿದರು.ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಬೇಕಿದೆ ಎಂದರಲ್ಲದೆ, ದೊಡ್ಡಬಳ್ಳಾಪುರ ತಾಲ್ಲೂಕಿಗೆ ಜಿಲ್ಲಾ ಆಸ್ಪತ್ರೆಗೆ ಮೂಲಭೂತ ಸೌಕರ್ಯ ಕಲ್ಪಿಸಿ, ಮೇಲ್ದರ್ಜೆಗೆ ಏರಿಸಲು ಈಗಾಗಲೇ 90 ಕೋಟಿ ರೂಪಾಯಿ ನೀಡುವಂತೆ ಆರೋಗ್ಯ ಇಲಾಖೆಯಿಂದ ಮನವಿ ಮಾಡಲಾಗಿದ್ದು, ಬಜೆಟ್ನಲ್ಲಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿ.ಕೆ.ವಿ.ಕೆ. ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ, ಸ್ವಾತಂತ್ರ್ಯ ನಂತರ ದೇಶದಲ್ಲಿದ್ದ ಆಹಾರದ ಕೊರತೆ ನೀಗಿಸಲು ಬೇರೆ ಬೇರೆ ದೇಶಗಳಿಂದ ಆಹಾರ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಆಗ, ನಮ್ಮಲ್ಲಿ ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸುವ ಸಲುವಾಗಿ, ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನದ ಮೊರೆ ಹೋಗಿ, ಆ ನಿಟ್ಟಿನಲ್ಲಿ ಹಸಿರು ಕ್ರಾಂತಿಯನ್ನು ಸಾಧಿಸಲು ಸಾಧ್ಯವಾಯಿತು ಎಂದರು.
ಕಾರ್ಯಕ್ರಮದಲ್ಲಿ ಸಚಿವರು ರೈತ ಸಾಧಕರನ್ನು ಸನ್ಮಾನಿಸಿದರು. ಕೃಷಿ ಮಳಿಗೆಗಳನ್ನು ಉದ್ಘಾಟಿಸಿ, ವೀಕ್ಷಿಸಿದರು. ಕೃಷಿಗೆ ಸಂಬಂಧಿಸಿದ ಮಾಹಿತಿಯನ್ನು ಒಳಗೊಂಡ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯಣ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಯಶೋಧಮ್ಮ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ಕೆ.ನಾಯಕ, ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ, ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಎ.ಪಿ.ಮಲ್ಲಿಕಾರ್ಜುನಗೌಡ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಡಾ.ಅರುಳ್ ಕುಮಾರ್, ತಹಶೀಲ್ದಾರ್ ಶಿವರಾಜ್, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ತಾಂತ್ರಿಕ ಅಧಿಕಾರಿ ರೂಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.