ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿದ್ದು, ಮೂರನೇ ಅಲೆ ಆರಂಭವಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ, ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪೌರಾಡಳಿತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ) ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊರೋನಾ ಸಂಕಷ್ಟದಿಂದಾಗಿ ಜನರು ಭಯಭೀತರಾಗಿದೇ ಸಹಕಾರ ನೀಡಬೇಕು ಎಂದರು.
ಕೋವಿಡ್ ಮೂರನೇ ಅಲೆ ಕುರಿತಂತೆ ತಜ್ಞ ವೈದ್ಯರು ವರದಿಯನ್ನು ಸಲ್ಲಿಸಿದ್ದು, ಸರ್ಕಾರ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋವಿಡ್ ವಿರುದ್ದದ ಹೋರಾಟಕ್ಕೆ ಸಜ್ಜಾಗಿದೆ ಎಂದು ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಪ್ರತಿ ತಾಲ್ಲೂಕಿನಲ್ಲಿ 50 ಬೆಡ್ ಸಾಮರ್ಥ್ಯದ ಒಟ್ಟು ನಾಲ್ಕು ಆಸ್ಪತ್ರೆಗಳು ಹಾಗೂ ವಿಕಲಚೇತನರಿಗಾಗಿಯೇ ಜಿಲ್ಲೆಯಲ್ಲಿ ಎರಡು ಆಸ್ಪತ್ರೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಕೋವಿಡ್ ಲಸಿಕೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಮಾತ್ರ ನೀಡಬೇಕು ಎಂದರಲ್ಲದೆ, ಹದಿನೆಂಟು ವರ್ಷ ಮೇಲ್ಪಟ್ಟವರಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಆಸ್ಪತ್ರೆಯಲ್ಲಿರುವ ವೆಂಟಿಲೇಟರ್‌ಗಳನ್ನು ನಿರ್ವಹಿಸುವಂತಹ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಬೇಕು, ತಪ್ಪಿದಲ್ಲಿ ವೆಂಟಿಲೇಟರ್‌ಗಳು ಹಾಳಾಗವ ಸಾಧ್ಯತೆಗಳಿರುವುದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಂಬಂಧಿಸಿದ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿಗಳಿಂದ ನೀರನ್ನು ಪೂರೈಸುವ ವ್ಯವಸ್ಥೆ ಮಾಡಲಾಗುತ್ತಿದ್ದು, ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿಗಳು ಬತ್ತಿಹೋಗಿರುವ ಕೊಳವೆಬಾವಿಗಳ ಹಳೆಯ ಮೋಟಾರು ಹಾಗೂ ಪಂಪ್‌ಸೆಟ್‌ಗಳನ್ನು ಹೊಸ ಕೊಳವೆಬಾವಿಗಳಿಗೆ ಅಳವಡಿಸುವ ಮೂಲಕ ಸರ್ಕಾರಿ ಹಣ ಪೋಲಾಗದಂತೆ ನೋಡಿಕೊಳ್ಳಬೇಕು ಎಂದ ಅವರು, ಈ ಕುರಿತು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಬೇಕು ಎಂದರು.
ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಹಣವನ್ನು ಅಧಿಕಾರಿಗಳು ತಮ್ಮ ವೈಯಕ್ತಿಕ ಖಾತೆಗಳಿಗೆ ಹಾಗೂ ಸ್ವಂತ ಕೆಲಸಗಳಿಗಾಗಿ ಬಳಸಿಕೊಂಡಿದ್ದಾರೆ ಎಂಬ ದೂರುಗಳು ಬಂದಿದ್ದು, ಗ್ರಾಮ ಪಂಚಾಯಿತಿಗಳು ಆದಾಯವನ್ನು ನಿಯಮಾನುಸಾರ ಸಂಗ್ರಹಿಸಿ, ಸರ್ಕಾರಿ ಖಾತೆಗೆ ಜಮಾ ಮಾಡಬೇಕು ಹಾಗೂ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು, ತಪ್ಪಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಆಸ್ತಿಗಳಾದ ಗೋಮಾಳ, ಕೆರೆ, ಕುಂಟೆಯಂತಹ ಜಮೀನುಗಳನ್ನು ಅಧಿಕಾರಿಗಳು ರಕ್ಷಿಸಬೇಕು ಹಾಗು ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಎಕರೆ ಜಮೀನನ್ನು ಆಶ್ರಯ ಮನೆ ಯೋಜನೆ, ಸ್ಮಶಾನ ಹಾಗೂ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವ ಮೂಲಕ ಸರ್ಕಾರಿ ಭೂಮಿಯನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ಕೋವಿಡ್ ಮೂರನೇ ಅಲೆ ತಡೆಯಲು ಸರ್ಕಾರದ ಮಾರ್ಗಸೂಚಿಯಂತೆ ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತೀ ತಾಲ್ಲೂಕಿನಲ್ಲಿ 50 ಹಾಸಿಗೆ ಸಾಮರ್ಥ್ಯದ ನಾಲ್ಕು ಆಸ್ಪತ್ರೆಗಳನ್ನು ಗುರುತಿಸಲಾಗಿದೆ, ಎಂವಿಜೆ ಹಾಗೂ ಆಕಾಶ್ ಆಸ್ಪತ್ರೆಯಲ್ಲಿ 50 ಹಾಸಿಗೆ, ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿ 40 ಹಾಸಿಗೆಗಳನ್ನು ಮೀಸಲಿಡಲಾಗಿದ್ದು, 10 ವರ್ಷದೊಳಗಿನ ಮಕ್ಕಳು ಕೋವಿಡ್ ಸೋಂಕಿಗೆ ಒಳಪಟ್ಟಲ್ಲಿ, ಸೋಂಕಿತ ಮಕ್ಕಳೊಂದಿಗೆ ಪಾಲಕರು ಇರಲು ಅವಕಾಶ ಕಲ್ಪಿಸುವ ಉದ್ದೇಶವಿದೆ ಎಂದರು.
“ಮಕ್ಕಳ ವೈದ್ಯರ ನಡೆ, ಹಳ್ಳಿ ಕಡೆ” ಎಂಬ ವಿನೂತನ ಕಾರ್ಯಕ್ರಮದಡಿಯಲ್ಲಿ ವೈದ್ಯರ ತಂಡ 412 ಹಳ್ಳಿಗಳಿಗೆ ಭೇಟಿ ನೀಡಲಾಗಿದ್ದು, 28417 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಕೆಲವು ಮಕ್ಕಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಂಡಿದ್ದು, ಆಯುಷ್ಮಾನ್ ಭಾರತ್ ಯೋಜನೆಯಡಿ ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ಚಿಕಿತ್ಸೆ ನೀಡಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, 101 ಗ್ರಾಮ ಪಂಚಾಯಿತಿಗಳ ಪೈಕಿ 18 ಗ್ರಾಮ ಪಂಚಾಯಿತಿಯ 31 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 41 ಹಳ್ಳಿಗಳಿಗೆ ಖಾಸಗಿ ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ವಿಶೇಷ ಅನುದಾನದ ಮೂಲಕ 8 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಸಚವರಿಗೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೋಲೀಸ್ ಅಧೀಕ್ಷಕ ಡಾ.ಕೋನ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ಡಿವೈಎಸ್ಪಿ ಟಿ.ರಂಗಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..