ಮೈಸೂರು: ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಅರಿವು ಮೂಡಿಸುವ ಸಲುವಾಗಿ ಕಾರ್ಮಿಕ ಇಲಾಖೆಯು ಬುಧವಾರ ಆಯೋಜಿಸಿದ್ದ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿರ್ಮೂಲನೆ ಜಾಥಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜ ಭೂತೆ ಅವರು ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಈ ಜಾಥದ ಮೂಲಕ ಮಕ್ಕಳ ಹಕ್ಕುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ಧ ಪ್ರಕರಣ ಕೈಗೊಳ್ಳುವ ಮೂಲಕ ಅವರಿಗೆ ಸೆರೆವಾಸದ ಶಿಕ್ಷೆ ಹಾಗೂ ದಂಡವನ್ನು ಹಾಕಲಾಗುವುದು ಎಂದರು.
ಸರ್ಕಾರವೇ ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಅನೇಕ ಕಾನೂನುಗಳನ್ನು ಮಾಡಿದೆ. ಹೀಗಾಗಿ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ರೀತಿಯ ಕಾರ್ಖಾನೆಗಳಲ್ಲಿ, ಹೋಟೆಲ್‍ಗಳಲ್ಲಿ ಹಾಗೂ ಅಪಾಯಕಾರಿ ಕೆಲಸಗಳಿಗೆ ಬಳಸಿಕೊಳ್ಳಬಾರದು. ಬಳಸಿಕೊಂಡರೆ ಅದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಮಿಕ ಆಯುಕ್ತರಾದ ನಾಜಿಯ ಸುಲ್ತಾನ, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಜೇಶ್ ಕೆ.ಜಾದವ್ ಸೇರಿದಂತೆ ಇತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..