ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತಿನ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಪಿ.ಗೋವಿಂದರಾಜು ಆಯ್ಕೆಯಾಗಿದ್ದಾರೆ.
ನಗರದ ಕನ್ನಡ ಜಾಗೃತ ಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಸದಸ್ಯರ ಸಮ್ಮುಖದಲ್ಲಿ ಆಯ್ಕೆಯನ್ನು ಪ್ರಕಟಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಅವರು, ಸಾಹಿತ್ಯ ಪರಿಷತ್ತಿಗೆ ತನ್ನದೇ ಆದ ಅಸ್ತಿತ್ವ ಹಾಗೂ ಇತಿಹಾಸವಿದ್ದು, ಪರಿಷತ್ತಿನ ಆಶಯ ಉದ್ದೇಶಗಳಿಗೆ ದಕ್ಕೆ ಬಾರದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ. ದೊಡ್ಡಬಳ್ಳಾಪುರ ತಾಲೂಕು ಹೋರಾಟಕ್ಕೆ ಹೆಸರಾಗಿದ್ದು, ಸಾಹಿತ್ಯ, ಸಂಸ್ಕೃತಿ ರಾಜಕೀಯ ಮೊದಲಾದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿದ್ದಾರೆ.
ಇತ್ತೀಚೆಗೆ ನಿಧನರಾದ ಹಿರಿಯ ರಾಜಕೀಯ ಮುತ್ಸದ್ದಿ ಆರ್.ಎಲ್.ಜಾಲಪ್ಪ, ಸಾಹಿತ್ಯ ವಿಮರ್ಶಕ ಡಿ.ಆರ್.ನಾಗರಾಜ್ ದೊಡ್ಡಬಳ್ಳಾಪುರ ಮೂಲದವರೇ ಆಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸ್ಮರಿಸಿದರು.
ನಿಯಮಾನುಸಾರ ಆಯ್ಕೆ: ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಾ ಪ್ರಕಾರ, ಪದಾಧಿಕಾರಿಗಳ ಆಯ್ಕೆ ನಡೆಯಬೇಕಿದೆ ಎಂದು ವಿವರಿಸಿದ ಅವರು, ಜಿಲ್ಲೆಯಲ್ಲಿ ತಾಲೂಕು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗಳು ನಡೆಯುತ್ತಿದೆ. ಕಸಾಪ ಸದಸ್ಯರ ಸಭೆಯಲ್ಲಿ, ಸದಸ್ಯರ ಸಮ್ಮುಖದಲ್ಲಿ, ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳನ್ನು ಗಣನೆಗೆ ತೆಗೆದುಕೊಂಡು, ಸದಸ್ಯರ ಒಮ್ಮತದಿಂದ ಆಯ್ಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ಗಣನೆಗೆ ತೆಗೆದುಕೊಂಡು ಕನ್ನಡ ಸಾಹಿತ್ಯ ಪರಿಷತ್ತಿನ ತಿಂಗಳ ಕಾರ್ಯಕ್ರಮಗಳು, ಸಮ್ಮೇಳನಗಳನ್ನು ಹಾಗೂ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಗೋವಿಂದರಾಜು ಮಾತನಾಡಿ, ದೊಡ್ಡಬಳ್ಳಾಪುರ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಹೋರಾಟಗಳಿಗೆ ಹೆಸರು ಮಾಡಿದ್ದು, ಧಾರವಾಡದಲ್ಲಿ ವಿದ್ಯಾವರ್ಧಕ ಸಂಘ ಬಿಟ್ಟರೆ ನಗರದ ಕನ್ನಡ ಜಾಗೃತ ಪರಿಷತ್ತು ಸ್ವಂತ ಭವನ ಹೊಂದಿದೆ. ಇಂತಹ ಹಲವಾರು ಸಂಘಟನೆಗಳು ತಾಲೂಕಿನಲ್ಲಿದ್ದು, ಹೋರಾಟಗಾರರು, ಸಾಹಿತ್ಯಾಸಕ್ತರು ಸೇರಿದಂತೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯಕ್ರಮಗಳನ್ನು ನಡೆಸಲಾಗುವುದು. ತಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಇದೇ ವೇಳೆ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಅವರನ್ನು ತಾಲೂಕಿನ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಸಾಹಿತ್ಯಾಸಕ್ತರು ಅಭಿನಂದಿಸಿದರು.
ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದೇವನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ನಂಜೇಗೌಡ, ಜಿಲ್ಲಾ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಡಿ.ವಿ.ಅಶ್ವತ್ಥಪ್ಪ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….