ಬೆಂ.ಗ್ರಾ.ಜಿಲ್ಲೆ: ಕೋವಿಡ್ -19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕರು ಸರ್ಕಾರ ವಿಧಿಸುವ ಪ್ರತಿಯೊಂದು ಕೋವಿಡ್ ನಿಯಮಾವಳಿವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಹಕರಿಸಿಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ದೇವನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಡ್ಡಾಯವಾಗಿ ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ, ಕೈಗಳನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಕೋವಿಡ್ ನಿಯಮಗಳ ಪಾಲನೆ ಮಾಡುವ ಮುಖಾಂತರ ಕೋವಿಡ್ ಸೋಂಕನ್ನು ತಡೆಗಟ್ಟಲು ಸಹಕರಿಸಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಕ್ರಮಕೈಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳು ಬಂದ್ ಆಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಶಾಲಾ-ಕಾಲೇಜುಗಳನ್ನು ಮುಚ್ಚಲು ಸರ್ಕಾರದಿಂದ ಯಾವುದೇ ಸೂಚನೆಗಳು ಬಂದಿರುವುದಿಲ್ಲ. ಆದ್ದರಿಂದ ಶಾಲಾ-ಕಾಲೇಜುಗಳು ಯಥಾವತ್ತಾಗಿ ಎಂದಿನಂತೆ ನಡೆಯುತ್ತಿವೆ ಎಂದು ತಿಳಿಸಿದರು.
ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುವ ಪ್ರದೇಶವನ್ನು ಸೆಮಿ ಕಂಟೋನ್ಮೆಂಟ್ ಪ್ರದೇಶವೆಂದು ಪರಿಗಣಿಸಿ, ಆ ಭಾಗದ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೈರಿಸ್ಕ್ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ವಿಮಾನ ನಿಲ್ದಾಣದಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರಲ್ಲದೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸರ್ಕಾರದ ಮಾನದಂಡಗಳನ್ನು ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹೊರ ರಾಜ್ಯದಲ್ಲಿರುವ ಶಬರಿಮಲೆ ಮತ್ತು ಓಂ ಶಕ್ತಿ ದೇವಸ್ಥಾನಗಳಿಗೆ ಭೇಟಿ ನೀಡಿದ ಪ್ರಯಾಣಿಕರು ಆಗಮಿಸಿದ ತಕ್ಷಣ ಕೆಎಸ್‌ಆರ್‌ಟಿಸಿ ಸಂಸ್ಥೆಯಿಂದ ಮಾಹಿತಿಯನ್ನು ಪಡೆದು ಕೋವಿಡ್ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆನಂದರಾಜು ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.
ಸುದ್ದಿಗೋಷ್ಠಿಗೂ ಮುನ್ನ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ದೇವನಹಳ್ಳಿ ಪಟ್ಟಣದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಲಸಿಕೆ ಹಾಕಿಸಿಕೊಂಡ ಮಕ್ಕಳ ಯೋಗಕ್ಷೇಮ ವಿಚಾರಿಸಿ ಧೈರ್ಯವನ್ನು ತುಂಬಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….