ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 04): ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಮಟ್ಟದ “ಬೃಹತ್ ಉದ್ಯೋಗಮೇಳ”ವನ್ನು ಆಯೋಜಿಸಲಾಗಿದ್ದು ಇದುವರೆಗೂ 5000 ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು ಅಂದಾಜು 15,000 ಉದ್ಯೋಗಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ಉದ್ಯೋಗ ಮೇಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಬೃಹತ್ ಉದ್ಯೋಗಮೇಳದಲ್ಲಿ ಅಂದಾಜು 100 ನಿಯೋಜಕರು/ಕಂಪನಿಗಳು ಹಾಗೂ 15,000 ಉದ್ಯೋಗಾಂಕ್ಷಿಗಳ ಭಾಗವಹಿಸುವ ನಿರೀಕ್ಷೆಯಿದೆ. ಉದ್ಯೋಗ ಮೇಳವನ್ನು ಯಶಸ್ವಿಯಾಗಿ ನಿಭಾಯಿಸಲು ಅಧಿಕಾರಿಗಳ ಸಹಭಾಗಿತ್ವ ಕೂಡ ಮುಖ್ಯ. ಉದ್ಯೋಗ ಮೇಳ ಆಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಆಯಾ ಸಮಿತಿಯ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಎಂದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಮೂಲಕ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಮೂಲಕವು ಕೂಡ ಉದ್ಯೋಗ ಮೇಳದ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡು ಪ್ರತಿ ಮನೆಗೂ ಮಾಹಿತಿ ತಲುಪಿಸಲು ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿರುವ ಮತ್ತು ವಿವಿಧ ತರಬೇತಿ ಸಂಸ್ಥೆಗಳಲ್ಲಿ ಕೌಶಲ್ಯ ತರಬೇತಿ ಪಡೆದ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿರುತ್ತದೆ.
ಉದ್ಯೋಗಮೇಳದಲ್ಲಿ ಭಾಗವಹಿಸುವ ಉದ್ಯೋಗಕಾಂಕ್ಷಿಗಳು https://bangalorerural.nic.in/en/job-fair/5 ನೋಂದಾಯಿಸಿಕೊಳ್ಳಬಹುದಾಗಿರುತ್ತದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಅವರು ಮಾತನಾಡಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಗ್ರಾಮ ಪಂಚಾಯಿತಿ ಪಿ.ಡಿ.ಒ ಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದ್ದು ಉದ್ಯೋಗ ಮೇಳಕ್ಕೆ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಕ್ರಮ ವಹಿಸಿ ಎಂದು ಹೇಳಲಾಗಿದೆ. ಉದ್ಯೋಗಾಂಕ್ಷಿಗಳು ಕೂಡ ಹತ್ತಿರದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗೂ ತಾಲ್ಲೂಕು ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿಯೂ ಕೂಡ ಅರ್ಜಿ ಸಲ್ಲಿಸಬಹುದಾಗಿದ್ದು ಉದ್ಯೋಗಾಂಕ್ಷಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಮರೇಶ್.ಹೆಚ್, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….