ನವದೆಹಲಿ: ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರನ್ನು ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ಈ ಕುರಿತು ಎಕ್ಸ್ನಲ್ಲಿ ಟ್ವಿಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಸಿನಿಮಾ ಕ್ಷೇತ್ರಕ್ಕೆ ಮಿಥುನ್ ಅವರು ನೀಡಿರುವ ಕೊಡುಗೆ ಮುಂದಿನ ತಲೆಮಾರಿಗೆ ಸ್ಪೂರ್ತಿಯಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಅಪ್ರತಿಮ ಕೊಡುಗೆಗಾಗಿ ದಾದಾಸಾಹೇಬ್ ಫಾಲ್ಕೆ ಆಯ್ಕೆ ತೀರ್ಪುಗಾರರು ಅವರ ಹೆಸರನ್ನು ಆಯ್ಕೆ ಮಾಡಿದ್ದು, ಸಂತಸದ ವಿಷಯ ಎಂದು ಬರೆದುಕೊಂಡಿದ್ದಾರೆ.
ಅ.8 ರಂದು ನಡೆಯುವ 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೈಷ್ಣವ್ ಹೇಳಿದ್ದಾರೆ.
1976ರಲ್ಲಿ ಮೃಣಾಲ್ ಸೇನ್ ಅವರ ಮೃಗಯಾ ಚಿತ್ರದ ಮೂಲಕ ಸಿನಿಮಾ ಕ್ಷೇತ್ರಕ್ಕೆ ಮಿಥುನ್ ಪದಾರ್ಪಣೆ ಮಾಡಿದ್ದರು. ಈ ಚಿತ್ರದಲ್ಲಿನ ಅತ್ಯುತ್ತಮ ನಟನೆಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೂ ಭಾಜನರಾಗಿದ್ದರು.
350ಕ್ಕೂ ಹೆಚ್ಚು ಚಿತ್ರಗಳಲ್ಲಿ ಮಿಥುನ್ ನಟಿಸಿದ್ದಾರೆ.