ಬೆಂಗಳೂರು ಗ್ರಾಮಾಂತರ ಜಿಲ್ಲೆ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವನ್ನು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘದ ದ ನೇತೃತ್ವದಲ್ಲಿ ಸದಸ್ಯರು ಹಾಗೂ ಅಧಿಕಾರಿ, ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ರಜಾ ದಿನವನ್ನು ಸೇರಿ ಐದನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆರಂಭವಾದ ಹೋರಾಟ ರಾಜ್ಯದ ಆಯಾ ಜಿಲ್ಲಾ ಕೇಂದ್ರಗಳ ಬಳಿಗಡ ವಿಸ್ತರಿಸಲಾಗಿದ್ದು, ಅಂತೆಯೇ ಸೋಮವಾರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟವನ್ನು ಗ್ರಾಮಪಂಚಾಯಿತಿ ಸಿಬ್ಬಂದಿಗಳು ಆರಂಭಿಸಿದ್ದಾರೆ.
ಗ್ರಾಮ ಪಂಚಾಯಿತಿ (Grama panchayath) ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಾಷ್ಟ್ರ ಧ್ವಜಾರೋಹಣ ಕಾರ್ಯ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಸಿಬ್ಬಂದಿ ಈ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.
ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರೆಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಹೇಳಿದರು.
ರಾಜ್ಯದ ಶೇ.68 ರಿಂದ 70 ಜನರಿಗೆ ಸ್ಥಳೀಯ ಸಂಸ್ಥೆಯಾದ ಗ್ರಾಮಪಂಚಾಯಿತಿಗಳಿಂದ ಶೇಕಡ 70 ರಷ್ಟು ಸೇವೆಗಳನ್ನು ನೀಡಲಾಗುತ್ತಿದೆ. ಈ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಎಲ್ಲಾ ಸಿಬ್ಬಂದಿಗಳು ಕಾರ್ಯ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಗ್ರಾಪಂ (Grama panchayath) ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ದಿಲೀಪ್, ಖಜಾಂಚಿ ತಿರುಪತಿ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಗಂಗಬೈರಪ್ಪ, ಉಪಾಧ್ಯಕ್ಷೆ ಸೌಮ್ಯ,
ಕರ ವಸೂಲಿಗಾರರ ಸಂಘದ ಅಧ್ಯಕ್ಷ ರಂಗಸ್ವಾಮಿ, ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಹಾಗೂ ಪಧಾಧಿಕಾರಿಗಳು, ಸಿಬ್ಬಂದಿ ಹೋರಾಟದಲ್ಲಿ ಭಾಗಹಿಸಿದ್ದಾರೆ.