ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ರಾಮ ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಅ.17ರಿಂದ 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ.
ಅ.17ರ ಬೆಳಗ್ಗೆ 8.30 ರಿಂದ ಅ. 18ರ ಬೆಳಗ್ಗೆ 8.30 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಇದಲ್ಲದೆ ಪ್ರತ್ಯೇಕವಾಗಿ ಅ.15ರಿಂದ ಮೂರು ದಿನ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಮೊದಲ ಎರಡು ದಿನ ಯೆಲ್ಲೋ ಮತ್ತು ಇನ್ನೊಂದು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಚಾಮರಾಜನಗರಕ್ಕೆ ಅ.15 ಮತ್ತು 16ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತಿರುಮಲದಲ್ಲಿ ಧಾರಾಕಾರ ಮಳೆ
ಬಂಗಾಳಕೊಲ್ಲಿ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ಆಂಧ್ರ ಪ್ರದೇಶದ ಹಲವು ಜಿಲ್ಲೆ ಗಳಲ್ಲಿ ಭಾರಿ ಮಳೆಯಾಗುತ್ತಿದೆ. ತಿರುಪತಿ, ಚಿತ್ತೂರು, ನೆಲ್ಲೂರು, ಪ್ರಕಾಶಂ, ಅನ್ನಮಯ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯದ ಐದು ಜಿಲ್ಲೆಗಳಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ಅಧಿಕಾರಿಗಳು ರಜೆ ಘೋಷಿಸಿದ್ದರು. ತುರ್ತು ಅಗತ್ಯ ಹೊರತು ಜನರು ಮನೆಯಿಂದ ಹೊರ ಬಾರದಂತೆ ಸೂಚನೆ ಹೊರಡಿಸಿದ್ದರು.
ತಿರುಮಲದಲ್ಲಿನ ಶ್ರೀವೆಂಕಟೇಶ್ವರ ದೇಗುಲ ಪ್ರದೇಶದಲ್ಲೂ ಸೋಮವಾರ ಧಾರಾಕಾರ ಮಳೆಯಾಗುತ್ತಿದೆ. ಪರಿಣಾಮ ದೇವಸ್ಥಾನದ ಸುತ್ತಲ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದ್ದು, ಭಕ್ತರು ತೀವ್ರ ತೊಂದರೆ ಅನುಭವಿಸಿದ್ದಾರೆ.
ತಿರುಮಲದ ಆಧ್ಯಾತ್ಮಿಕ ಮಂದಿರ ಪ್ರದೇಶ ದಲ್ಲಿ ಬೆಳಗಿನ ಜಾವದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ಶ್ರೀವಾರಿ ದೇವಸ್ಥಾನ ಮತ್ತು ಸುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ.
ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರನ್ನು ಭಾರೀ ಮಳೆಯಿಂದಾಗಿ ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಟಿಟಿಡಿ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಯ್ಯ ಚೌಧರಿ ತಿಳಿಸಿದ್ದಾರೆ.