ಪರಿಶಿಷ್ಟ ಜಾತಿಯ ಹೆಸರಲ್ಲಿ ಅಕ್ರಮವಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಆರ್.ಲತಾ
ಪರಿಶಿಷ್ಟ ಜಾತಿಯ ಹೆಸರಲ್ಲಿ ಅಕ್ರಮವಾಗಿ ಸರ್ಕಾರದ ಸೌಲಭ್ಯಗಳನ್ನು ಪಡೆದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ ಆರ್.ಲತಾ

ಬೆಂ.ಗ್ರಾ.ಜಿಲ್ಲೆ, (ಜ.21): ಜಿಲ್ಲೆಯ ಸಫಾಯಿ ಕರ್ಮಚಾರಿಗಳು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು, ಗೌರವಯುತ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಸಮಾನತೆ ಹಾಗೂ ನೆಮ್ಮದಿಯುತ ಜೀವನ ನಡೆಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಏರ್ಪಡಿಸಲಾದ ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955, ಪ.ಜಾತಿ/ಪ.ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ಎಸ್.ಪಿ.ಎಸ್.ಪಿ /ಐ.ಎಸ್.ಪಿ. ಪಿ.ಇ.ಎಂ.ಎಸ್, 2013 ಆಕ್ಟ್, ಸುಳ್ಳುಜಾತಿ ಪ್ರಮಾಣ ಪತ್ರ ಹಾಗೂ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ವಿಷಯಗಳಿಗೆ ಸಂಬಂಧಿಸಿದಂತೆ ಜಿಲ್ಲೆ ಹಾಗೂ ತಾಲ್ಲೂಕು/ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಹಾಗೂ ಸಫಾಯಿ ಕರ್ಮಚಾರಿಗಳಿಗೆ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955, ಪ.ಜಾತಿ/ಪ.ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ರನ್ವಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಕ್ತಗಳ ಮೇಲೆ ದೌರ್ಜನ್ಯ ಎಸಗಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಿದ್ದು, ಗ್ರಾಮಗಳಲ್ಲಿ ಯಾವುದೇ ವ್ಯಕ್ತಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ಸಂಭವಿಸದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಶಾಂತಿ ಸಭೆಗಳನ್ನು ನಡೆಸಲು ಕ್ರಮ ವಹಿಸುವಂತೆ ಸೂಚಿಸಿದರು.

ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆ ಅಧಿನಿಯಮ-2013 ರ ಕಾಯ್ದೆಯ ಬಗ್ಗೆ ಮಾತನಾಡಿ ಸದರಿ ಕಾಯ್ದೆಯನ್ವಯ ಎಲ್ಲಾ ಇಲಾಖೆಗಳಲ್ಲಿ ಸದರಿ ಯೋಜನೆಗಳಡಿ ಬಿಡುಗಡೆಯಾಗುವ ಅನುದಾನದಲ್ಲಿ ಅರ್ಹ ಪಲಾನುಭವಿಗಳಿಗೆ ಸರ್ಕಾರ ಒದಗಿಸಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಜನಾಂಗದವರು ಸ್ವಯಂ ಉದ್ಯೋಗವನ್ನು ಕಲ್ಪಿಸಿಕೊಡುವಂತೆ ಎಲ್ಲಾ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಒಂದು ವೇಳೆ ಕಾಯ್ದೆಯನ್ನು ನಿರ್ಲಕ್ಷಿಸಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಎಸ್.ಸಿ.ಎಸ್.ಪಿ/ ಟಿ,ಎಸ್,ಪಿ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ದಾಖಲಿಸಬಹುದಾಗಿದೆ ಎಂದು ತಿಳಿಸಿದರು.

ಸುಳ್ಳು ಜಾತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ರಮವಾಗಿ ಪರಿಶಿಷ್ಟ ಜಾತಿಯ ಜಾತಿ ಪ್ರಮಾಣ ಪತ್ರಗಳನ್ನು ಪಡೆದು ಸರ್ಕಾರದ ವಿವಿಧ ಸೌಲಭ್ಯಗಳನ್ನು ಅಕ್ರಮವಾಗಿ ಪಡೆದಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲು ವಿವಿಧ ಕಾಯ್ದೆಗಳಡಿ ಅವಕಾಶ ಕಲ್ಪಿಸಲಾಗಿದೆ ಎಂದರು. 

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಅಡಿಯಲ್ಲಿ ಮಲ ಹೊರುವ ಹಾಗೂ ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಫಾಯಿ ಕರ್ಮಚಾರಿಗಳು ಬ್ಯಾಂಕ್ ಖಾತೆ ತೆರೆಯಲು ಬಂದಂತಹ ಸಂದರ್ಭದಲ್ಲಿ ಸರ್ಕಾರ ಅವರಿಗೆ ನೀಡಿರುವ ಗುರುತಿನ ಚೀಟಿಯನ್ನು ರಾಷ್ಟ್ರೀಕೃತ ಹಾಗೂ ಲೀಡ್ ಬ್ಯಾಂಕುಗಳು ದಾಖಲೆಯಾಗಿ ಪರಿಗಣಿಸಿ, ಶೂನ್ಯ ಉಳಿತಾಯ ಖಾತೆ ತೆರೆಯಲು ಎಲ್ಲಾ ಬ್ಯಾಂಕುಗಳು ಸಹಕಾರ ನೀಡಬೇಕು ಎಂದರು.

ಜೊತೆಗೆ ವಿವಿಧ ಇಲಾಖೆಗಳು ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಬೇಕು ಎಂದರಲ್ಲದೆ, ಯಾವೊಬ್ಬ ಅರ್ಹ ಫಲಾನುಭವಿಯು ಇದರಿಂದ ವಂಚಿತರಾಗಬಾರದು ಎಂದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ ಮಾತನಾಡಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಅಡಿಯಲ್ಲಿ ಮಲ ಹೊರುವ ಹಾಗೂ ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಜೊತೆಗೆ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ಕಂಡುಬಂದಿರುವ ಸಫಾಯಿ ಕರ್ಮಚಾರಿಗಳಿಗೆ ವಿವಿಧ ಯೋಜನೆಗಳನ್ನು ಸರ್ಕಾರ ಒದಗಿಸುತ್ತಿದೆ ಎಂದು ಮಾಹಿತಿ ನೀಡಿದರು.

ಸಫಾಯಿ ಕರ್ಮಚಾರಿಗಳಿಗೆ ಹಾಗೂ ಪೌರಕಾರ್ಮಿಕರಿಗೆ ವೈದ್ಯಕೀಯ ಸೌಲಭ್ಯ, ಆಹಾರ ಹಾಗೂ ಅವರ ಕುಟುಂಬಕ್ಕೆ ಶೈಕ್ಷಣಿಕ ಸೌಲಭ್ಯದಂತಹ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಸೌಲಭ್ಯದ ಮಾಹಿತಿ ಇಲ್ಲದವರು, ವಂಚಿತರು ತಮ್ಮ ಹಕ್ಕನ್ನು ಕೇಳಿಪಡೆಯುವ ಮೂಲಕ ಸಬಲೀಕರಣಗೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಟಿ.ಎಸ್.ಎಸ್ ಪ್ರೇಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ, ರಾಜ್ಯ ಮೇಲುಸ್ತುವಾರಿ ಸಮಿತಿ ಸದಸ್ಯ ಕೆ.ಬಿ.ಓಬಳೇಶ್, ಸಂಪನ್ಮೂಲ ವ್ಯಕ್ತಿ ತುಮಕೂರಿನ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಂಗಸ್ವಾಮಿ.ಎಂ.ಆರ್, ತುಮಕೂರು ವಿಶ್ವವಿದ್ಯಾಲಯದ ಸಂಪನ್ಮೂಲ ವ್ಯಕ್ತಿ ರಂಗಸ್ವಾಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಫಾಯಿ ಕರ್ಮಚಾರಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....